ಗುರುವಾರ , ನವೆಂಬರ್ 21, 2019
27 °C
ಕಾಮಗಾರಿ ವೀಕ್ಷಣೆ

ರೈಲ್ವೆ ಮೇಲ್ಸೇತುವೆ ಕಾಮಗಾರಿ 9 ತಿಂಗಳೊಳಗೆ ಪೂರ್ಣ: ಶಾಸಕ ಪ್ರೀತಂ ಗೌಡ

Published:
Updated:
Prajavani

ಹಾಸನ: ನಗರದ ಹೊಸ ಬಸ್ ನಿಲ್ದಾಣ ಸಮೀಪ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ 9 ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಪ್ರೀತಮ್ ಜೆ. ಗೌಡ ಹೇಳಿದರು.

ನಗರದ ಎನ್.ಆರ್, ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳ ಜೊತೆ ವೀಕ್ಷಿಸಿ, ಸಂಬಂಧಪಟ್ವವರಿಂದ ಮಾಹಿತಿ ಪಡೆದು ಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಮಗಾರಿ ಕುರಿತು ರೈಲ್ವೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಹಿಂದೆ ಕಾಮಗಾರಿ ಪೂರ್ಣಗೊಳಿಸಲು ಎರಡು ವರ್ಷ ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಒಂದು ವರ್ಷ ಕಳೆದಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿವರಿಸಿದರು.

ಕಾಮಗಾರಿಯಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಎರಡು ತಿಂಗಳಲ್ಲಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗುತ್ತದೆ. ಈ ಮಾರ್ಗದಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಿ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನುಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸರ್ಕಾರದ ಮಟ್ಟದಲ್ಲಿ ಯಾವುದೇ ರೀತಿಯ ಲೋಪದೋಷವಿದಲ್ಲಿ ಜಿಲ್ಲಾಡಳಿತ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಯೋಜನೆ ರೂಪಿಸಲಾಗಿದೆ ಎಂದರು.

ಜಿಲ್ಲೆಯನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತವಾಗಿಸುವ ಜೊತೆಗೆ ರಸ್ತೆ ಅಭಿವೃದ್ಧಿಯತ್ತ ಹೆಚ್ಚಿನ ಗಮನ ಹರಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಕ್ರಮವಹಿಸಲಾಗುತ್ತಿದೆ ಎಂದು ವಿವರಿಸಿದರು.

ರಾಜ್ಯ ರಾಜಕಾರಣದ ಕುರಿತು ಪ್ರತಿಪಕ್ಷ ನಾಯಕರ ಟೀಕೆಗೆ ಪ್ರತಿಕ್ರಿಯಿಸಲು ಹಿರಿಯ ನಾಯಕರಿದ್ದಾರೆ. ‘ನಾನು ಇನ್ನು ಚಿಕ್ಕವನು. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಗಮನಹರಿಸುತ್ತೇನೆ. ಮಳೆ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸದ್ಯದಲ್ಲೇ ಪರಿಹಾರ ಬಿಡುಗಡೆ ಮಾಡಲಾಗುತ್ತದೆ’ ಎಂದು ಪ್ರಶ್ನೆಯೊಂದ‌ಕ್ಕೆ ಉತ್ತರಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಹಾಜರಿದ್ದರು.

 

 

ಪ್ರತಿಕ್ರಿಯಿಸಿ (+)