ಶುಕ್ರವಾರ, ಏಪ್ರಿಲ್ 23, 2021
30 °C
ಜಿಲ್ಲೆಯಲ್ಲಿ ಶೇ 93 ಗುರಿ ಸಾಧನೆ

ಪೋಲಿಯೊ ಲಸಿಕೆ ಹಾಕಿಸಲು ಶಾಸಕ ಪ್ರೀತಂ ಜೆ.ಗೌಡ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಆರೋಗ್ಯ ದೃಷ್ಟಿಯಿಂದ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್‌ ಪೋಲಿಯೊ ಲಸಿಕೆ ಹಾಕಿಸುವಂತೆ ಶಾಸಕ ಪ್ರೀತಂ ಜೆ. ಗೌಡ ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ನಗರದ ಹಾಸನ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನವನ್ನು ಮಗುವಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಯಾವುದೇ ಮಗು ಅನಾರೋಗ್ಯಕ್ಕೆ ತುತ್ತಾಗಿ ಭವಿಷ್ಯ ಹಾಳು ಮಾಡಿಕೊಳ್ಳಬಾರದು. 2021ರಲ್ಲಿ ವಿಶ್ವವನ್ನು ಮಾರಕ ಕೊರೊನಾ ವಿಪರೀತ ಕಾಡಿತು. ರೋಗ ರುಜಿನಗಳು ಹರಡದಂತೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ರೋಗ ನಿರೋಧಕ ಶಕ್ತಿ ವೃದ್ಧಿಗೆ ಪೋಲಿಯೊ ಹನಿ ನೆರವಾಗುತ್ತದೆ. ಬೂತ್ ಮಟ್ಟದಲ್ಲಿ ಅಂಗನವಾಡಿ, ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಉಳಿದ ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡಿ ಲಸಿಕೆ ನೀಡುತ್ತಾರೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ. ಬಿ.ಸಿ. ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್‍ಕುಮಾರ್, ಆರ್‌ಸಿಎಚ್ ಅಧಿಕಾರಿ ಡಾ. ಕಾಂತರಾಜು, ಲಕ್ಷ್ಮಿಕಾಂತ್, ಹಿಮ್ಸ್ ಮಕ್ಕಳ ವಿಭಾಗ ಮುಖ್ಯಸ್ಥ ಡಾ. ಪ್ರಸನ್ನ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ. ವಿನಯ್, ಆಯುಷ್ ಅಧಿಕಾರಿ ವೀಣಾ ಹಾಗೂ ಇತರರು ಇದ್ದರು.

ಜಿಲ್ಲೆಯಲ್ಲಿ ಶೇಕಡಾ 93.47ರಷ್ಟು ಗುರಿ ಸಾಧನೆ ಮಾಡಲಾಗಿದೆ. ಒಟ್ಟು 1,28,563 ಮಕ್ಕಳ ಪೈಕಿ 1,20,163 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಆಲೂರು ಶೇಕಡಾ 97.73, ಅರಕಲಗೂಡು ಶೇ 94.88, ಅರಸೀಕೆರೆ ಶೇ 94.89, ಬೇಲೂರು ಶೇ 94.38, ಚನ್ನರಾಯಪಟ್ಟಣ 93.82, ಹಾಸನ 93.32, ಹೊಳೆನರಸೀಪುರ 92.82, ಸಕಲೇಶಪುರ 84.86 ರಷ್ಟು ಗುರಿ ಸಾಧಿಸಲಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು