ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್ ಜೋಡಣೆಗೆ ವಾರದ ಗಡುವು

ನೇರ ಸೌಲಭ್ಯ ವರ್ಗಾವಣೆ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ
Last Updated 17 ಜೂನ್ 2019, 12:51 IST
ಅಕ್ಷರ ಗಾತ್ರ

ಹಾಸನ: ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅನುಷ್ಠಾನಕ್ಕೆ ಅತ್ಯಂತ ತುರ್ತಾಗಿ ಆಧಾರ್ ಜೋಡಣೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.

ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲು ಆಧಾರ್ ಜೋಡಣೆ ಕಡ್ಡಾಯ. ವಾರದೊಳಗೆ ಇದನ್ನು ಪೂರ್ಣಗೊಳಿಸುವಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಮೊದಲ ಕಂತಿನ ಹಣ ವರ್ಗಾವಣೆ ಹಾಗೂ ಬೆಳೆ ಪರಿಹಾರಕ್ಕೂ ರೈತರ ಖಾತೆಗಳಿಗೆ ಆಧಾರ್ ಜೋಡಣೆ ಆಗಬೇಕಿದ್ದು, ತಕ್ಷಣವೇ ಕಾರ್ಯ ಪ್ರವೃತ್ತರಾಗುವಂತೆ ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಅಧಿಕಾರಿಗಳು ಮತ್ತು ಲೀಡ್ ಬ್ಯಾಂಕ್ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಬೇಕು, ಮಾಧ್ಯಮಗಳ ಮೂಲಕ ಹಾಗೂ ಕ್ಷೇತ್ರ ಮಟ್ಟದಲ್ಲಿ ಜಾಗೃತಿ ಕಾರ್ಯ ನಡೆಸುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯಗಳ ವಿಲೇವಾರಿ, ಸ್ವಚ್ಚತೆ ಬಗ್ಗೆ ಗರಿಷ್ಠ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಪ್ರತಿನಿತ್ಯ ವ್ಯವಸ್ಥಿತವಾಗಿ ಸಂಗ್ರಹಿಸಿ ಸಾಗಾಟ ಮಾಡಿ ವೈಜ್ಞಾನಿಕವಾಗಿ ಪರಿವರ್ತನೆ ಗೊಳಿಸಬೇಕು ಎಂದು ಪಾಷಾ ಹೇಳಿದರು.

ಪ್ಲಾಸ್ಟಿಕ್ ನಿಷೇಧ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸವುದರ ಜೊತೆಗೆ ನಿರ್ಬಂಧವನ್ನು ಅನುಷ್ಠಾನಕ್ಕೆ ತರಬೇಕು ಎಂದು ತಿಳಿಸಿದರು.

ಹುಣಸಿನಕೆರೆ, ಸಾಲಗಾಮೆ, ಹಳೇಬೀಡು ಕೆರೆಗಳು ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿನ ಪ್ರಮುಖ ಕೆರೆಗಳು ಅಭಿವೃದ್ಧಿಯಾಗಬೇಕು. ಅದಕ್ಕಾಗಿ ನಿರಂತರವಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರೊಂದಿಗೆ ಮೇಲ್ವಿಚಾರಣೆ ಮಾಡಲಾಗುವುದು ಎಂದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್. ವಿಜಯ ಪ್ರಕಾಶ್ ಮಾತನಾಡಿ, ಜಿಲ್ಲೆಯಲ್ಲಿ ಜಲಾಮೃತ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಇದಕ್ಕಾಗಿ ಪ್ರತಿ ತಾಲ್ಲೂಕಿಗೆ 2-3 ಬೃಹತ್ ಕೆರೆ ಗುರುತಿಸಲು ಸಣ್ಣ ನೀರಾವರಿ ಇಲಾಖೆ ಮೂಲಕ ಅಭಿವೃದ್ಧಿ ಪಡಿಸಲು ಗುರಿ ನಿಗದಿಪಡಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು.

ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ಜಲಾಮೃತ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ ಮಾಡುವ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರ ಸಹಯೋಗದೊಂದಿಗೆ ಮಾದರಿ ಜಿಲ್ಲೆಯಾಗಿ ರೂಪಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ವಿ. ಅರುಣ್ ಕುಮಾರ್, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಮಧುಸೂದನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸವಿತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT