ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: 2023 ರ ಡಿಸೆಂಬರ್‌ಗೆ ವಿಮಾನ ಹಾರಾಟ ಆರಂಭ

ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಕೆಎಸ್ಐಡಿಸಿ ಅಧ್ಯಕ್ಷ ಶೈಲೇಂದ್ರ ಭರವಸೆ
Last Updated 23 ಜುಲೈ 2022, 8:04 IST
ಅಕ್ಷರ ಗಾತ್ರ

ಹಾಸನ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಾಮಗಾರಿ ಭರದಿಂದ ನಡೆಯುತ್ತಿದ್ದು, 2023ರ ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಆಗಲಿದೆ. ವಿಮಾನ ಹಾರಾಟ ಆರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ತಿಳಿಸಿದರು.

ಶುಕ್ರವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ಮೂಲಸೌಕರ್ಯ ಸಚಿವ ವಿ. ಸೋಮಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಯ ವಿಮಾನ ನಿಲ್ದಾಣಗಳ ಕಾಮಗಾರಿ ಅಭಿವೃದ್ಧಿ ಪರಿಶೀಲನೆ ಮಾಡಲಾಗುತ್ತಿದೆ. ಹಾಸನದ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಗೆ ಬಂದಿದ್ದು, ಅಧಿಕಾರಿಗಳು ಸಕಾರಾತ್ಮಕವಾಗಿ ಮಾಹಿತಿ ನೀಡಿದ್ದಾರೆ ಎಂದರು.

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು 5.13 ಎಕರೆ ಹೆಚ್ಚುವರಿ ಜಮೀನಿನ ಅವಶ್ಯಕತೆ ಇದ್ದು, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭೂ ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿದೆ ಎಂದರು.

2.2 ಕಿಮೀ ರನ್‌ವೇ ಹಾಗೂ ಇತರ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ₹193 ಕೋಟಿ ಈಗಾಗಲೇ ಬಿಡುಗಡೆಯಾಗಿದ್ದು, ಶೇ 30ರಷ್ಟು ಕಾಮಗಾರಿ ಪೂರ್ಣವಾಗಿದೆ. ರಸ್ತೆ ಸಂಪರ್ಕ, ವಾಚ್ ಟವರ್ ಸೇರಿದಂತೆ ಇತರೆ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ₹70 ಕೋಟಿ ಎರಡನೇ ಕಂತು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಜಿಲ್ಲೆಯಲ್ಲಿ ಉತ್ತಮ ಬೆಳವಣಿಗೆ ಆಗಲಿದೆ. ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ಉತ್ತಮ ಸಂಪರ್ಕ ಸೇತುವಾಗಿ ವಿಮಾನ ನಿಲ್ದಾಣ ಅಭಿವೃದ್ಧಿ ಆಗಲಿದೆ ಎಂದರು.

ಬೀದರ್ ಹಾಗೂ ಕಲಬುರ್ಗಿ ಮಾದರಿಯಲ್ಲಿಯೇ ಹಾಸನದಲ್ಲಿಯೂ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದ ಅವರು, ಇದರಿಂದ ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್, ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಹಾಜರಿದ್ದರು.

ಎಕರೆಗೆ ₹1.20 ಕೋಟಿ ಪರಿಹಾರ

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲು 5.13 ಎಕರೆ ಅಗತ್ಯವಿದ್ದು, ಪ್ರತಿ ಎಕರೆಗೆ ₹1.20ಕೋಟಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಪ್ರೀತಂ ಗೌಡ ತಿಳಿಸಿದರು.

ಕೆಪಿಟಿಸಿಎಲ್ ವಿದ್ಯುತ್ ಮಾರ್ಗ ಬದಲಾವಣೆ ಹಾಗೂ ನಿಲ್ದಾಣಕ್ಕೆ ಸಂಪರ್ಕ ರಸ್ತೆ ನಿರ್ಮಾಣ ಸಂಬಂಧ ಈಗಾಗಲೇ ಮಾತುಕತೆ ಅಂತಿಮವಾಗಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದರು.

2023ರ ಡಿಸೆಂಬರ್‌ಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದ್ದು, ಹಾಸನದಿಂದ ಇತರೆ ರಾಜ್ಯಗಳಿಗೆ ಉತ್ತಮ ವಿಮಾನ ಸೇವೆ ಒದಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT