ಭಾನುವಾರ, ಸೆಪ್ಟೆಂಬರ್ 19, 2021
31 °C

ದೋಣಿಗಾಲ್; ಭೂ ಕುಸಿತ ಸ್ಥಳಕ್ಕೆ ಶಾಸಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ‘ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿರುವು ದರಿಂದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ರಸ್ತೆಯಲ್ಲಿ ಲಘು ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶ ನೀಡಬೇಕು’ ಎಂದು ಶಾಸಕ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

ದೋಣಿಗಾಲ್‌ ಬಳಿ ಭೂ ಕುಸಿತ ಉಂಟಾಗಿದ್ದ ಸ್ಥಳಕ್ಕೆ ಸೋಮವಾರ ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್‌ ಅವರೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರಾವಳಿ ಹಾಗೂ ಬೆಂಗಳೂರು ನಡುವಿನ ಸಂಪರ್ಕಕ್ಕೆ ಇದು ಸರಿಯಾದ ಮಾರ್ಗ. ಪ್ರಯಾಣಿಕರು ಹಾಗೂ ಅಗತ್ಯ ವಸ್ತುಗಳ ಸಾಗಣೆ ದೃಷ್ಟಿಯಿಂದ ದೋಣಿಗಾಲ್‌ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕು’ ಎಂದು ತಿಳಿಸಿದರು.

‘ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರುವ ಆದೇಶವನ್ನು ಜಿಲ್ಲಾಧಿಕಾರಿ ಮರು ಪರಿಶೀಲಿಸಬೇಕು. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ 24 ಗಂಟೆಯೂ ವಾಹನಗಳು ಸಂಚರಿಸುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಭಾಗದ ಶಾಲಾ ಕಾಲೇಜುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಪುಣ್ಯ ಕ್ಷೇತ್ರಗಳಿಗೆ ಪಕ್ಕದ ಕೇರಳ ರಾಜ್ಯಕ್ಕೆ ಹೋಗಿ ಬರುವವರ ಸಂಖ್ಯೆ ಹೆಚ್ಚಿದೆ’ ಎಂದರು.

ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ಮಾತನಾಡಿ, ‘ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಎರಡು ದಿನ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ ಗಳಿಂದ ವೈಜ್ಞಾನಿಕ ದೃಢೀಕರಣ ಪಡೆದ ನಂತರ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್. ಹರೀಶ್‌, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಾಷಾ, ಶಿರಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಸಂಜಿತ್‌ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಆನೇಮಹಲ್ ಹಸೈನಾರ್ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು