ಅಪೌಷ್ಟಿಕ ಮಕ್ಕಳ ಸಂಖ್ಯೆ 110

7
ಸಂಪೂರ್ಣ ನಿಯಂತ್ರಣಕ್ಕೆ ಕ್ರಮವಹಿಸಲು ಪ್ರಭಾರಿ ಸಿಇಒ ಸೂಚನೆ

ಅಪೌಷ್ಟಿಕ ಮಕ್ಕಳ ಸಂಖ್ಯೆ 110

Published:
Updated:
Prajavani

ಹಾಸನ: ಜಿಲ್ಲೆಯಲ್ಲಿ ಅಪೌಷ್ಟಿಕತೆ ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಪ್ರಭಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಸಿ ಪುಟ್ಟಸ್ವಾಮಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 110 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.  ಸಾಧಾರಣ ಅಪೌಷ್ಟಿಕತೆಯ 2213 ಮಕ್ಕಳು ಇದ್ದಾರೆ. ಸಾಧಾರಣ ಪೌಷ್ಟಿಕತೆಯಿರುವ 2279 ಮಕ್ಕಳು ಇದ್ದು, ತಾಲ್ಲೂಕುವಾರುಗಳಲ್ಲಿ ತೂಕ ಕಡಿಮೆ ಇರುವ ಮಕ್ಕಳು ಹಾಗೂ ಸಾಧಾರಣಾ ಅಪೌಷ್ಟಿಕತೆಯಿರುವ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರ ಒದಗಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಅಂಗನವಾಡಿ ಮಕ್ಕಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ತಿಳಿಸಿದರು.

ಹೊಳೆನರಸೀಪುರ ಹಾಗೂ ಬೇಲೂರು ತಾಲ್ಲೂಕುಗಳಲ್ಲಿ ಹೆಚ್ಚಿನ ಸುಧಾರಣೆಗಳು ನಡೆಯಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ಸರ್ಕಾರದ ಆದೇಶವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಕಡಿಮೆಯಾಗಿದೆ. ಇದು ಸಂಪೂರ್ಣ ನಿರ್ಬಂಧಗೊಳ್ಳಬೇಕು. ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಇದೇ ರೀತಿ ಗ್ರಾಮೀಣ ಪ್ರದೇಶಗಳ ಜನರಿಗೆ ಶೌಚಾಲಯದ ಬಳಕೆ ಬಗ್ಗೆ ಅರಿವು ಮೂಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕ್ರಮವಹಿಸಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ರೋಗ ನಿರ್ವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ. ರಾಜಗೋಪಾಲ್, ಆರ್.ಸಿ.ಎಚ್.ಒ ಡಾ. ಜನಾರ್ಧನ್, ಡಿಎಸ್ಒ ಡಾ.ಹಿರಣಯ್ಯ, ಕಿರಿಯ ಆರೋಗ್ಯ ಸಹಾಯಕ ಸತೀಶ್‌, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !