ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭಾ ಚುನಾವಣೆ|ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ನೀಡಿದಂತೆ; ಅಮಿತ್‌ ಶಾ

ಆಲೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಮಿತ್‌ ಶಾ ರೋಡ್‌ ಶೋ
Published 24 ಏಪ್ರಿಲ್ 2023, 11:29 IST
Last Updated 24 ಏಪ್ರಿಲ್ 2023, 11:29 IST
ಅಕ್ಷರ ಗಾತ್ರ

ಆಲೂರು (ಹಾಸನ): ಕಳೆದ ಬಾರಿ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಮತ ನೀಡಿದ್ದೀರಿ. ಆದರೆ ಏನಾಯಿತು. ಅವರು ಕಾಂಗ್ರೆಸ್‌ ಜೊತೆಗೆ ಸೇರಿ ಸರ್ಕಾರ ರಚನೆ ಮಾಡಿದರು. ಇದರರ್ಥ ಜೆಡಿಎಸ್‌ಗೆ ಮತ ಹಾಕಿದರೆ, ಅದು ಕಾಂಗ್ರೆಸ್‌ ನೀಡಿದಂತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ರೋಡ್‌ ಶೋ ನಡೆಸಿದ ನಂತರ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಬಿಜೆಪಿಗೆ ಒಂದೇ ಸ್ಥಾನ ಸಿಕ್ಕಿತ್ತು. ಶಾಸಕ ಪ್ರೀತಂ ಗೌಡ ಅವರು ಜೆಡಿಎಸ್‌ನ ಕುಟುಂಬ ರಾಜಕಾರಣದ ವಿರುದ್ಧ ಅಭಿವೃದ್ಧಿ ರಾಜಕಾರಣ ಮಾಡಿದ್ದಾರೆ. ಇದರ ಆಧಾರದಲ್ಲಿ ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆಲ್ಲಲಿದೆ ಎಂದರು.

ಜೆಡಿಎಸ್‌ ನಾಯಕರು, ಪ್ರೀತಂ ಗೌಡರನ್ನು ಕ್ಷೇತ್ರದಿಂದ ಓಡಿಸಿ ಎಂದು ಹೇಳುತ್ತಿದ್ದಾರೆ. ನನ್ನನ್ನೂ ಸೇರಿಸಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷವನ್ನು ಮೈದಾನದಿಂದ ಓಡಿಸುವುದು ಅಷ್ಟು ಸುಲಭವಲ್ಲ ಎಂದು ತಿರುಗೇಟು ನೀಡಿದರು.

ಜೆಡಿಎಸ್‌–ಕಾಂಗ್ರೆಸ್‌ ಪಕ್ಷಗಳು ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡಿದ್ದವು. ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆ ಮೀಸಲಾತಿಯನ್ನು ರದ್ದುಪಡಿಸಿ, ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ, ಪಂಗಡದವರಿಗೆ ನೀಡಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುತ್ತಿದ್ದಾರೆ. ಈಗಿರುವ ಮೀಸಲಾತಿಯಲ್ಲಿ ಯಾರ ಹಕ್ಕನ್ನು ಕಸಿದು ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೀರಿ ಎಂದು ಪ್ರಶ್ನಿಸಿದರು.

ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಅಭ್ಯರ್ಥಿಗಳಾದ ಪ್ರೀತಂ ಗೌಡ, ಸಿಮೆಂಟ್ ಮಂಜುನಾಥ್, ಎಚ್‌.ಕೆ. ಸುರೇಶ್, ಸಂಸದ ಪ್ರತಾಪ್‌ ಸಿಂಹ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT