ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರ | ಮಗು ಮಾರಾಟ: ತಾಯಿ, ಆಶಾ ಕಾರ್ಯಕರ್ತೆ ಸೇರಿ ಐವರ ಬಂಧನ

Published 4 ಜನವರಿ 2024, 7:12 IST
Last Updated 4 ಜನವರಿ 2024, 7:12 IST
ಅಕ್ಷರ ಗಾತ್ರ

ಸಕಲೇಶಪುರ: ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಗಂಡು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಡೆದಿದ್ದು, ಮಗುವಿನ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಲಾಗಿದೆ.

2023ರ ನವೆಂಬರ್ 15ರಂದು ಸಕಲೇಶಪುರ ತಾಲ್ಲೂಕಿನ ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಿರಿಜಾ ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು.‌ ತನಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ ಎಂದು ಮಗು ಹುಟ್ಟಿದ ಮಾರನೇ ದಿನ ಅಂದರೆ ನವೆಂಬರ್ 16 ರಂದು ಚಿಕ್ಕಮಗಳೂರಿನ ಉಷಾ ಎಂಬ ಮಹಿಳೆಗೆ ಮಗು ಹಸ್ತಾಂತರ ಮಾಡಿದ್ದರು. ಮಗು ಅನಧಿಕೃತವಾಗಿ ಹಸ್ತಾಂತರ ಆಗಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿದ್ದು, ಇದನ್ನು ಆಧರಿಸಿ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್ ನೇತೃತ್ವದ ತಂಡ ಪ್ರಕರಣವನ್ನು ಪತ್ತೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಕೊಂಡ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗೂ ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ.

ತಮಗೆ ಈಗಾಗಲೇ ಇಬ್ಬರು ಮಕ್ಕಳಿದ್ದ ಕಾರಣ ಮಗುವನ್ನು ಬೇರೆಯವರಿಗೆ ನೀಡಿದ್ದಾಗಿ ತನಿಖೆ ವೇಳೆ ಬಗ್ಗೆ ತಾಯಿ ಗಿರಿಜಾ ಮಾಹಿತಿ ನೀಡಿದ್ದಾರೆ.

ಕೆಲವರ ಪ್ರೇರಣೆಯಿಂದ ಮಗುವನ್ನು ಮಾರಾಟ ಮಾಡಿದ ಬಗ್ಗೆ ಆರೋಪ ಕೇಳಿಬಂದಿದೆ. ತಾಯಿ-ಮಗುವಿನ ರಕ್ಷಣೆ ಬಗ್ಗೆ ಗಮನಹರಿಸಬೇಕಿದ್ದ ಆಶಾ ಕಾರ್ಯಕರ್ತೆಯಿಂದಲೇ ಕಾನೂನು ಉಲ್ಲಂಘನೆಗೆ ಬೆಂಬಲ ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಜನವರಿ 2 ರಂದು ಬಂದ ಖಚಿತ ಮಾಹಿತಿ ಆಧರಿಸಿ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಸಕಲೇಶಪುರ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಮಗುವಿಗೆ ಹಾಸನ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT