ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ| ಮಾ.13 ರಂದು ಫಲಾನುಭವಿಗಳ ಸಮಾವೇಶ: ಗೋಪಾಲಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ: ಸಚಿವ ಗೋಪಾಲಯ್ಯ
Last Updated 4 ಮಾರ್ಚ್ 2023, 4:37 IST
ಅಕ್ಷರ ಗಾತ್ರ

ಹಾಸನ: ಜಿಲ್ಲಾ ಫಲಾನುಭವಿಗಳ ಸಮಾವೇಶ ಹಾಗೂ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಮಾ.13 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಮಾ.13ರಂದು ಬೆಳಿಗ್ಗೆ 11 ಗಂಟೆಗೆ ಫಲಾನುಭವಿಗಳ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೃಷಿ ಸಚಿವ ಬಿ.ಸಿ. ಪಾಟೀಲ್, ವಸತಿ ಸಚಿವ ವಿ.ಸೋಮಣ್ಣ ಸೇರಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿದ್ದು, ಫಲಾನುಭವಿಗಳೊಂದಿಗೆ ಸಮಾವೇಶ ನಡೆಸುವ ಮೂಲಕ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕ ಪ್ರೀತಂ ಗೌಡ ಮಾತನಾಡಿ, ಹಾಸನ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿಮಾನ ನಿಲ್ದಾಣ ಕಾಮಗಾರಿ, ಟ್ರಕ್ ಟರ್ಮಿನಲ್, ಅತಿಥಿ ಗೃಹ, ಹಾಸ್ಟೆಲ್ ಕಾಮಗಾರಿಗಳಿಗೆ ಅಂದು ಚಾಲನೆ ನೀಡಲಾಗುವುದು. ನಗರದಲ್ಲಿ ನಿರ್ಮಾಣವಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಿಂಗ್ ರಸ್ತೆ ಉದ್ಘಾಟನೆ ನಡೆಯಲಿದೆ ಎಂದು ಹೇಳಿದರು.

ಅಧಿಕಾರಿಗಳಿಗೆ ಸೂಚನೆ: ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಗೋಪಾಲಯ್ಯ, ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಫಲಾನುಭವಿಗಳನ್ನು ಕರೆ ತರಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆಗೆ ಒಂದು ಸಾವಿರ, ನಗರಸಭೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗೆ ತಲಾ 500 ಫಲಾನುಭವಿಗಳನ್ನು ಕರೆ ತರುವಂತೆ ಗುರಿ ನೀಡಲಾಯಿತು.

ತಾಲ್ಲೂಕುವಾರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು, ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಮಾತನಾಡಿ, ಅಧಿಕಾರಿಗಳು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ, ಮಾ.6ರೊಳಗೆ ಪಟ್ಟಿ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್, ಉಪ ವಿಭಾಗಧಿಕಾರಿಗಳಾದ ಕೃಪಾಲಿನಿ, ಅನ್‌ಮೋಲ್ ಜೈನ್, ಜಂಟಿ ಕೃಷಿ ನಿರ್ದೇಶಕಿ ಡಾ. ರಾಜಸುಲೋಚನಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಆಹಾರ ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕ ಸಂಜಯ್, ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಲೋಕಾಯುಕ್ತ ದಾಳಿ: ಮುಜುಗರವಿಲ್ಲ

ಲೋಕಾಯುಕ್ತ ದಾಳಿಯಲ್ಲಿ ಸಿಲುಕಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ವಿರುದ್ಧ ಸರ್ಕಾರ ಸರ್ಕಾರ ಈಗಾಗಲೇ ಕಾನೂನು ಕ್ರಮಕ್ಕೆ ಸೂಚಿಸಿದ್ದು, ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ದಾಳಿಯಿಂದ ಸರ್ಕಾರಕ್ಕೆ ಮುಜುಗರವಾಗುವ ವಿಷಯವೇ ಇಲ್ಲ. ತನಿಖೆಗೆ ಸರ್ಕಾರವೇ ಸೂಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ. ಕಾಂಗ್ರೆಸ್‌ನವರು ಲಕ್ಷ ಲಕ್ಷ ಕೋಟಿ ಲಂಚ ಹೊಡೆದಿದ್ದಾರೆ. ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಶೇ 40 ಕಮಿಷನ್‌ ಸರ್ಕಾರ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರದ ಯಾವ ಸಚಿವರು ಕಮಿಷನ್ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಒದಗಿಸಲಿ. ನಾವು ಲೋಕಾಯಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದು, ಅಧಿಕಾರಿಗಳು ಅವರ ಕೆಲಸ ನಿರ್ವಹಿಸಲಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆ ಅನುಭವಿಸುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT