ಶುಕ್ರವಾರ, ಜನವರಿ 15, 2021
21 °C
ನಾಳೆ ಬಿಜೆಪಿ ಜನ ಸೇವಕ್‌ ಸಮಾವೇಶ: ಸಚಿವ ಗೋಪಾಲಯ್ಯ

ಶೀಘ್ರ ಜನ ಸಂಪರ್ಕ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮಗಳನ್ನು ಹಳ್ಳಿ ಹಳ್ಳಿಗೂ ತಲುಪಿಸಬೇಕೆಂಬ ಉದ್ದೇಶದಿಂದ ರಾಜ್ಯದಾದ್ಯಂತ ಜನ ಸೇವಕ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜ. 11 ರಂದು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಐದು ತಂಡಗಳು 30 ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿವೆ. ಜ.12ರ ಬೆಳಗ್ಗೆ 11 ಗಂಟೆಗೆ ಹಾಸನದ ಪವನಪುತ್ರ ಕಲ್ಯಾಣ ಮಂಟಪದಲ್ಲಿ ಜನ ಸೇವಕ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸನ್ಮಾನಿಸಲಾಗುವುದು. ಕಂದಾಯ ಸಚಿವ ಆರ್. ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್, ಸಂಸದ ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 150 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಮೋದಿ ಮತ್ತು ಬಿ.ಎಸ್‌ ಯಡಿಯೂರಪ್ಪ ಅವರ ಜನಪರ ಆಡಳಿತದಿಂದ 1200ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಪಕ್ಷ ಗಟ್ಟಿಯಾಗಿ ಬೇರೂರುತ್ತಿದೆ ಎಂಬುದನ್ನು ನಿರೂಪಿಸಿದ್ದಾರೆ ಎಂದರು.

ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿಲ್ಲ. ಬೇಲೂರು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರೂ ರಣಘಟ್ಟ ಯೋಜನೆಗೆ ₹125 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು. ಮಲೆನಾಡಿನಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳುವ ಸಂಬಂಧ ಹತ್ತು ದಿನದೊಳಗೆ ಅರಣ್ಯ ಸಚಿವ ಆನಂದ್ ಸಿಂಗ್ ಅವರನ್ನು ಕರೆಸಿ ಸಭೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತನ್ನು ಯಾವತ್ತೂ ತಪ್ಪುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಸ್ವಲ್ಪ ತಡವಾಗಿದ್ದು ಹೈ ಕಮಾಂಡ್ ಸೂಚನೆಗೆ ಕಾಯುತ್ತಿದ್ದಾರೆ ಎಂದರು.

ಪಡಿತರ ಜೊತೆಗೆ ಮೈಸೂರು ಸ್ಯಾಂಡಲ್‌ ಸೋಪು, ಉಪ್ಪು ಮತ್ತು ಅಡುಗೆ ಎಣ್ಣೆ ನೀಡುವ ಬಗ್ಗೆ ಚಿಂತನೆ ಇದೆ. ಕೋವಿಡ್‌ ಕಾರಣದಿಂದ ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಲು ಆಗಿಲ್ಲ. ಕೆಲವೇ ದಿನಗಳಲ್ಲಿ ತಾಲ್ಲೂಕು ಕೇಂದ್ರದಲ್ಲಿ ಜನ ಸಂಪರ್ಕ ಸಭೆಗಳನ್ನು ಆಯೋಜಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಪರಿಹಾರ ಒದಗಿಸಲಾಗುವುದು ಎಂದು ವಿವರಿಸಿದರು.

ಬಿಜೆಪಿ ಮುಖಂಡ ಎಚ್‌.ಎಂ ವಿಶ್ವನಾಥ್‌ ಮಾತನಾಡಿ, ಸಕಲೇಶಪುರ ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಕಾಫಿ, ಭತ್ತ ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಬೆಳೆಗಾರರ ಸಮಸ್ಯೆ ಆಲಿಸಬೇಕು. ಜೊತೆಗೆ ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಚಿವ ಕೆ.ಗೋಪಾಲಯ್ಯ ಅವರಲ್ಲಿ ಮನವಿ ಮಾಡಿದರು.

ಶಾಸಕ ಪ್ರೀತಂ ಜೆ. ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ಮುಖಂಡ ನವಿಲೆ ಅಣ್ಣಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು