ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಸಂಪರ್ಕಿತರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸಿ’

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚನೆ
Last Updated 28 ಅಕ್ಟೋಬರ್ 2020, 2:57 IST
ಅಕ್ಷರ ಗಾತ್ರ

ಹಾಸನ: ‘ಕಳೆದ 3 ದಿನಗಳಿಂದ ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಗುರಿಯನ್ನು ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ, ಅವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲ್ಲೂಕು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದ ಅವರು, ‘ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರ ಮನೆಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ತಿಳಿಸಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಕೋವಿಡ್ ಆರೈಕೆ ಕೇಂದ್ರಗಳ ವರದಿಯನ್ನು ನಿತ್ಯ ಪಡೆದು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಂಬಂಧಿಸಿದ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಹೇಳಿದರು.

‘ಸಾರ್ವಜನಿಕರಿಗೆ ಕೋವಿಡ್-19 ಬಗ್ಗೆ ಐ.ಇ.ಸಿ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರನ್ನು ಪ್ರೇರೇಪಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ. ಪರಮೇಶ್ ಮಾತನಾಡಿ, ‘ಗ್ರಾಮ ಪಂಚಾಯಿತಿಗೆ ಬರುವ ಜನರನ್ನು ಕೋವಿಡ್ ಪರೀಕ್ಷೆ ಮಾಡಿಸಲು ಪ್ರೇರೇಪಿಸುವ ಕಾರ್ಯ ಮಾಡಬೇಕು’ ಎಂದು ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಹಲವಾರು ಸ್ತ್ರೀ ಶಕ್ತಿ ಹಾಗೂ ಸ್ವ-ಸಹಾಯ ಸಂಘಗಳಿದ್ದು, ಅವುಗಳ ಸಂಯೋಜಕರಿಗೆ ನಿರ್ಧಿಷ್ಟ ಗುರಿಯನ್ನು ನೀಡಿ ಸಂಘದ ಸದಸ್ಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಆಯಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಉಪ ವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್ ಹಾಗೂ ಗಿರೀಶ್ ನಂದನ್, ತಹಶೀಲ್ದಾರ್‌ ಶಿವಶಂಕರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT