ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಡಿ ಕೈಗಾರಿಕೆ ಮಹಿಳೆಯರಿಗೆ ಮೀಸಲಿಡಿ’

ಸ್ತ್ರೀಶಕ್ತಿ ಸಂಘಗಳಿಗೆ ಬೀಜಧನ ಚೆಕ್‌ ವಿತರಿಸಿದ ಶಾಸಕ ಶಿವಲಿಂಗೇಗೌಡ ಅಭಿಮತ
Last Updated 24 ಜುಲೈ 2022, 5:21 IST
ಅಕ್ಷರ ಗಾತ್ರ

ಅರಸೀಕೆರೆ: ‘ದೇಶದ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಮಾನವ ಸಂಪತ್ತು ಸದ್ಬಳಕೆ ಆಗಬೇಕು. ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗುಡಿ ಕೈಗಾರಿಕೆಗಳನ್ನು ಮಹಿಳೆಯರಿಗೆ ಮೀಸಲಿಡುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕು’ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಆಯ್ಕೆಯಾದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಬೀಜಧನ ನೆರವಿನ ಚೆಕ್ ವಿತರಿಸಿ ಅವರು ಮಾತನಾಡಿದರು.

ಮಹಿಳೆಯರು ತಯಾರಿಸಿದ ಗುಡಿ ಕೈಗಾರಿಕಾ ವಸ್ತುಗಳನ್ನು ಮಾರಾಟ ಮಾಡಲು ಸರ್ಕಾರವೇ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ಈ ನಿಟ್ಟಿನಲ್ಲಿ ಬ್ಯಾಂಕ್‌ಗಳು ಮಹಿಳೆಯರಿಗೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಮೂಲಕ ಉತ್ತೇಜನ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಗುಡಿ ಕೈಗಾರಿಕೆಗಳ ಪುನಶ್ಚೇತನ ಆಗಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ್ಡಿ ರಹಿತ ಸಾಲ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಇಂದಿನ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿದ್ಧಉಡುಪು ತಯಾರಿಕಾ ಕಾರ್ಖಾನೆಗಳು ಬಹುಪಾಲು ಮಹಿಳೆಯರನ್ನೇ ಅವಲಂಬಿಸಿವೆ. ಗ್ರಾಮೀಣ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವೇ ಹೆಚ್ಚು ಗಾರ್ಮೆಂಟ್ಸ್ ಉದ್ಯಮಗಳನ್ನು ತೆರೆಯಬೇಕು. ಮಹಿಳೆಯರು ತಯಾರಿಸಿದ ಗುಡಿ ಕೈಗಾರಿಕೆ ವಸ್ತುಗಳನ್ನು ಸರ್ಕಾರವೇ ನೇರವಾಗಿ ಖರೀದಿಸಬೇಕು. ಆಗಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯವಾಗುತ್ತದೆ ಎಂದರು.

ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿ.ವಿ.ಟಿ. ಬಸವರಾಜ್ ಮಾತನಾಡಿ, ‘ಮಹಿಳೆಯರು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಮುನ್ನೆಲೆಗೆ ಬರಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರಕುತ್ತಿವೆ. ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಸೇರಿದಂತೆ ದೇಶದ ಮಹಾನ್ ಧೀಮಂತ ಸಾಧಕ ಮಹಿಳೆಯರು ಸ್ಫೂರ್ತಿಯಾಗಲಿ’ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಡಿ. ಪ್ರಸಾದ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಕರ್ ಮೂರ್ತಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿನಯ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ, ವಿವಿಧ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು, ಕೌಶಲಾಧಾರಿತ ತರಬೇತಿದಾರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT