ಶುಕ್ರವಾರ, ಜನವರಿ 22, 2021
23 °C

ಎಚ್‌.ಡಿ ಕುಮಾರಸ್ವಾಮಿ ದ್ವಂದ್ವ ನಿಲುವು: ಎನ್. ಚೆಲುವರಾಯಸ್ವಾಮಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನರಾಯಪಟ್ಟಣ: ‘ಒಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇವೆ ಎಂಬಂತೆ ವರ್ತಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಾರೆ. ಈಗ ಬಿಜೆಪಿಯನ್ನು ವಿರೋಧಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದ್ವಂದ್ವ ನಿಲುವು ಅನುಸರಿಸುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಎನ್. ಚೆಲುವರಾಯಸ್ವಾಮಿ ಟೀಕಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಚಾಮಡಿಹಳ್ಳಿ ಗೇಟ್ ಬಳಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನೆ ಮತ್ತು ಸೋತ ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಾವೇನು ಮುಖ್ಯಮಂತ್ರಿ ಮಾಡುವಂತೆ ಕೇಳಿರಲಿಲ್ಲ. ಕಾಂಗ್ರೆಸ್‌ನವರು ನಮ್ಮ ಬಳಿಗೆ ಬಂದಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ ಅವರು ಬುದ್ಧಿವಂತರು. ಹಿಂದಿನ ದಿನವೇ ಕಾಂಗ್ರೆಸ್ ನಾಯಕರಿಗೆ ದೂರವಾಣಿ ಕರೆ ಮಾಡಿ ಬರಲು ಹೇಳುತ್ತಾರೆ. ಮುಖ್ಯಮಂತ್ರಿಯನ್ನಾಗಿ ಮಾಡಿದ ಕಾಂಗ್ರೆಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ’ ಎಂದು ಜೆಡಿಎಸ್ ನಾಯಕರನ್ನು ಟೀಕಿಸಿದರು.

‘ಕಳೆದ 2-3 ತಿಂಗಳಿಂದ ಜೆಡಿಎಸ್ ಪಕ್ಷದ ನಡೆಯನ್ನು ಗಮನಿಸಿದರೆ ಮತ್ತೊಮ್ಮೆ ಕಾಂಗ್ರೆಸ್ ತಪ್ಪು ಎಸಗಬಾರದು. ಆ ಪಕ್ಷದ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದ ಹಿತ ಕಾಪಾಡುವರು ಯಾರು ಎಂಬುದು ಜನರಿಗೆ ಮನವರಿಕೆಯಾಗಿದೆ. 5 ಜಿಲ್ಲೆಗಷ್ಟೇ ಸೀಮಿತವಾಗಿದ್ದ ಜೆಡಿಎಸ್ ಶಕ್ತಿ ಈಗ ಮಂಡ್ಯ, ಹಾಸನ ಜಿಲ್ಲೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪಾಂಡವಪುರ ಹೊರತುಪಡಿಸಿದರೆ ಉಳಿದ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿಯೂ ಶೇ 40ರಷ್ಟು ಕಾಂಗ್ರೆಸ್ ಬೆಂಬಲಿತರು ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದಾರೆ’ ಎಂದರು.

‘ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಸಲುವಾಗಿ ರಾಜ್ಯದ ನಾಲ್ಕು ಕಂದಾಯ ವಿಭಾಗದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಲಾಗುವುದು ಎಂದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತು ನೀಡಿದಂತೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸುವರು. ವಿಧಾನಸಭಾ ಚುನಾವಣೆ ನಡೆಯುವ ಒಂದು ವರ್ಷಕ್ಕಿಂತ ಮುಂಚೆ ಅಭ್ಯರ್ಥಿಯನ್ನು ಘೋಷಿಸುವಂತೆ ನಾಯಕರಿಗೆ ಮನವಿ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಎಂ. ರಾಮಚಂದ್ರ, ಎಂ.ಕೆ. ಮಂಜೇಗೌಡ, ಉಸ್ತುವಾರಿ ಸಂಜಯ್ ಗೌಡ, ಮುಖಂಡ ಎಚ್.ಎಸ್. ವಿಜಯಕುಮಾರ್ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಚ್.ಎಸ್. ಶ್ಯಾಮಲಾ, ಮುಖಂಡರಾದ ಸಿ.ಎಸ್. ಜಯರಾಂ. ಎಚ್.ಸಿ.ದೀಪು, ಎನ್.ಡಿ. ಕಿಶೋರ್ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು