ಭಾನುವಾರ, ಅಕ್ಟೋಬರ್ 25, 2020
28 °C
ಮಾಸ್ಕ್‌, ಸ್ಯಾನಿಟೈಸರ್, ಅಂತರ ಪಾಲನೆ ಕಡ್ಡಾಯ: ನ್ಯಾ. ಶಿವಣ್ಣ

ಕೋವಿಡ್ ಜನಾಂದೋಲನ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕೋವಿಡ್-19 ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ‘ಕೋವಿಡ್-19 ಜನಾಂದೋಲನ ಅಭಿಯಾನ’ಕ್ಕೆ ಪ್ರಧಾನ ಜಿಲ್ಲಾ ಮತ್ತು ಸೇಷನ್ಸ್‌ ನ್ಯಾಯಾಧೀಶ ಶಿವಣ್ಣ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌, ಸ್ಯಾನಿಟೈಸರ್‌, ಅಂತರ ಪಾಲನೆ ಮಾಡಬೇಕು. ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಅಪಾಯಗಳನ್ನು ಮನಸಿನಲ್ಲಿ ಇಟ್ಟುಕೊಂಡು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

‘ಎಲ್ಲರೂ ಒಗ್ಗಟ್ಟಾಗಿ ಕೊರೊನಾ ಓಡಿಸೋಣ’ ಎಂದು ಶಿವಣ್ಣ ಅವರು ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

 ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಕೋವಿಡ್ ತ್ವರಿತಗತಿಯಲ್ಲಿ ಹೆಚ್ಚಾಗುತ್ತಿದೆ. ಒಟ್ಟಾರೆ ಪ್ರಕರಣಗಳಲ್ಲಿ ಶೇಕಡಾ 70 ರಷ್ಟು ರೋಗ ಲಕ್ಷಣಗಳಿಲ್ಲ. ಸಾರ್ವಜನಿಕರು ನಿರ್ಲಕ್ಷ್ಯ ತೋರದೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‍ಗೌಡ ಮಾತನಾಡಿ, ಮದುವೆ, ವಿಜಯೋತ್ಸವ, ಜಾತ್ರಾ ಮಹೋತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದರು.

ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಎಂ.ಎಚ್. ಶಾಂತ, ಕೆ.ನಾರಾಯಣ ಪ್ರಸಾದ್, ರವೀಂದ್ರ ಹೆಗಡೆ, ನಾಗವೇಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಡಾ. ಬಶೀರ್, ವಕೀಲರ ಸಂಘದ ಅಧ್ಯಕ್ಷ ಜೆ.ಪಿ. ಶೇಖರ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.