ಶನಿವಾರ, ಮೇ 15, 2021
27 °C
ಹಾಸ್ಟೆಲ್‌ಗಳಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶ

ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನರಾಯಪಟ್ಟಣ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಹಾಸ್ಟೆಲ್‌ಗಳಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವಂತೆ ಪೋಷಕರಿಂದ ಒತ್ತಡ ಇರುವ ಹಿನ್ನೆಲೆಯಲ್ಲಿ ಜ. 27ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣದಲ್ಲಿ 7 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಬಿಸಿಎಂ ಹಾಸ್ಟೆಲ್ ಮತ್ತು ಗೂರಮಾರನಹಳ್ಳಿ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಶಾಲೆಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

‘ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಮೂಲಸೌಕರ್ಯ, ಊಟದ ವ್ಯವಸ್ಥೆ ಸೇರಿ ಶುಚಿತ್ವದ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲಾಗುವುದು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುವುದು’ ಎಂದರು.

‘ರಾಜ್ಯದಲ್ಲಿ ಸಾಕಷ್ಟು ಬಿಸಿಎಂ ಹಾಸ್ಟೆಲ್‌ಗಳು ಬಾಡಿಗೆಯ ಆಧಾರದ ಮೇಲೆ ನಡೆಯುತ್ತಿದೆ ಎಂದ ಅವರು, ರಾಜ್ಯದಲ್ಲಿ ಕಾಮಗಾರಿ ಆರಂಭಿಸಿರುವ ಕಟ್ಟಡಗಳಿಗೆ ಹಣಕಾಸಿನ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿರುವ ಪಟ್ಟಣದ ಬಿಸಿಎಂ ಹಾಸ್ಟೆಲ್ ಕಟ್ಟಡಕ್ಕೆ ಬಾಕಿ ಇರುವ ₹ 4 ಕೋಟಿ ಬಿಡುಗಡೆ ಮಾಡಬೇಕು. ಅದೇ ರೀತಿ ಗೂರಮಾರನಹಳ್ಳಿಯಲಿರುವ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಶಾಲೆಯ ದುರಸ್ತಿಗೆ ₹ 50 ಲಕ್ಷ ಬಿಡುಗಡೆ ಮಾಡುವಂತೆ’ ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಮಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಶಾಲೆಯ ಅಡುಗೆ ಕೋಣೆ, ಊಟದ ಹಾಲ್, ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವನಂಜೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿ ಎಸ್. ಹರ್ಷ, ತಾಲ್ಲೂಕು ಅಧಿಕಾರಿ ಬಿ.ಕೆ. ಪುಟ್ಟಸ್ವಾಮಿ, ಪ್ರಾಂಶುಪಾಲರಾದ ಕಲ್ಪನಾ, ಸಂತೋಷ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು