ಗುರುವಾರ , ಮಾರ್ಚ್ 23, 2023
29 °C
ಡಿ.ಸಿ ಕಚೇರಿ ಮುಂದೆ ಜೆಡಿಎಸ್‌ ಕಾರ್ಯಕರ್ತರ ಧರಣಿ

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಮುಖಂಡ ಅಗಿಲೆ ಯೋಗೇಶ್‌ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹಾಸನ ತಾಲ್ಲೂಕಿನಲ್ಲಿ ಅಂದಾಜು 13 ಸಾವಿರ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ತಾಲ್ಲೂಕಿಗೆ 10 ಸಾವಿರ ಆಹಾರ ಕಿಟ್‌ ನೀಡಲಾಗಿದೆ. ಆದರೆ, ಕ್ಷೇತ್ರದ ಶಾಸಕ ಪ್ರೀತಂ ಗೌಡರ ಆದೇಶದಂತೆ ಇಲಾಖೆ ಅಧಿಕಾರಿಗಳು ನಗರದ ಕಲ್ಯಾಣ ಮಂಟಪಗಳಲ್ಲಿ ಕಿಟ್‌ ದಾಸ್ತಾನು ಮಾಡಿದ್ದಾರೆ. ಈ ಕಿಟ್‌ಗಳನ್ನು ಬಿಜೆಪಿ ಕಾರ್ಯಕರ್ತರು ಕಾರ್ಮಿಕರಲ್ಲದವರಿಗೂ ಮನ ಬಂದಂತೆ ಹಂಚಿಕೆ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಕಿಟ್‌ ವಿತರಣೆಯಲ್ಲಿ ಅಕ್ರಮ ನಡೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರಜ್ವಲ್‌ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಂಡಿಲ್ಲ. ಕಾರ್ಮಿಕರಿಗೆ ಈವರೆಗೂ ಕಿಟ್‌ ವಿತರಣೆ ಮಾಡಿಲ್ಲ ಎಂದು ದೂರಿದರು.

ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘ಕೇಂದ್ರ ಕಚೇರಿಯಿಂದ ಆಹಾರ ಕಿಟ್‌ಗಳು ಬಂದಿದ್ದು, ಶೀಘ್ರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಗುವುದು’ ಎಂದು ಕಾರ್ಮಿಕ ಅಧಿಕಾರಿ ರಾಮಕೃಷ್ಣ ಅವರು ಭರವಸೆ ಮೇರೆಗೆ ಪ್ರತಿಭಟನೆ ಅಂತ್ಯಗೊಳಿಸಿದರು. 

ಪ್ರತಿಭಟನೆಯಲ್ಲಿ ಜೆಡಿಎಸ್‌ ಕಾರ್ಯಕರ್ತರಾದ ಸುದೀಪ್‌, ವಿಶ್ವನಾಥ್‌, ಗಿರೀಶ್‌, ಅಬೀಬ್‌, ಶೇಖರ್‌, ದಸ್ತಗಿರ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು