ಹಾಸನ: ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದ್ದು, ತಂದೆ– ತಾಯಂದಿರು 18 ವರ್ಷ ತುಂಬುವ ಮುನ್ನವೇ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎನ್. ಇನವಳ್ಳಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗಳ ಆಶ್ರಯದಲ್ಲಿ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತಾದ ತರಬೇತಿ ಕಾರ್ಯಕ್ರಮ ಉದ್ಘಾಟನೆ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ದತಿ ತಡೆಗಟ್ಟಲು ಅಧಿಕಾರಿಗಳು ಎಚ್ಚರ ವಹಿಸಬೇಕು. ಎಲ್ಲಾದರೂ ಬಾಲಕಾರ್ಮಿಕರು ಕಂಡು ಬಂದಲ್ಲಿ ದೂರು ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು. ಬಾಲ ಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತಗೊಳಿಸಿ, ಉತ್ತಮ ಶಿಕ್ಷಣ ನೀಡುವ ಮೂಲಕ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಎಂದರು.
ಸಮಾಜದಲ್ಲಿ ಉತ್ತಮ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸಮಯ ಪಾಲನೆಗೆ ಹೆಚ್ಚು ಒತ್ತು ನೀಡುವಂತೆ ತಿಳಿಸಿದ ಅವರು, ಸರಿಯಾದ ದಾರಿಯಲ್ಲಿ ನಡೆಯದೇ ಇರುವವರನ್ನು ಸರಿಯಾದ ರೀತಿಯಲ್ಲಿ ನಡೆಸುವುದೇ ಕಾನೂನು. ನಮ್ಮ ಪಾತ್ರವನ್ನು ನಾವು ಸರಿಪಡಿಸಿಕೊಂಡರೆ ಸಮಾಜ ಸರಿಯಾಗುತ್ತದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಮಾತನಾಡಿ, ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅನುಷ್ಠಾನ ಮಾಡುವ ಮುನ್ನ ನಾವು ನಮ್ಮ ಮನೆ ಮತ್ತು ನಮ್ಮ ಸಂಸ್ಥೆಗಳಲ್ಲಿ ತಡೆಗಟ್ಟಲು ಸ್ವಯಂ ಅರಿವು ಇರಬೇಕು. ಮಕ್ಕಳಿಗೆ ಶಿಕ್ಷಣ ಬಹು ಮುಖ್ಯವಾಗಿದ್ದು, ತಂದೆ– ತಾಯಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಕಾಂತ, ಕಾರ್ಮಿಕ ಅಧಿಕಾರಿ ಯಮುನಾ, ಕಾರ್ಮಿಕ ನಿರೀಕ್ಷಕ ಆನಂದ ರಾಮು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.