ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡತಪ್ಪಲೆ ಭೂಕುಸಿತ | ಕೇಂದ್ರ ಸಚಿವ ಗಡ್ಕರಿಗೆ ಪತ್ರ: ಸಿದ್ದರಾಮಯ್ಯ

Published : 3 ಆಗಸ್ಟ್ 2024, 11:10 IST
Last Updated : 3 ಆಗಸ್ಟ್ 2024, 11:10 IST
ಫಾಲೋ ಮಾಡಿ
Comments

ಹಾಸನ: ಸಕಲೇಶಪುರ ತಾಲ್ಲೂಕಿನ ದೊಡ್ಡತಪಲೆ ಬಳಿ ಸಂಭವಿಸುತ್ತಿರುವ ಭೂಕುಸಿತದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು.

ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗುಡ್ಡ ಕುಸಿತಕ್ಕೆ ಕಾರಣಗಳ ಕುರಿತು ಮಾಹಿತಿ ಪಡೆದರು. ಕೂಡಲೇ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಖರ್ಚು ಕಡಿಮೆ ಮಾಡಲು ತಡೆಗೋಡೆ ನಿರ್ಮಿಸದೇ, 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಆಕ್ರೋಶ ಪಡಿಸಿದ ಸಿದ್ದರಾಮಯ್ಯ, ಕೇಂದ್ರ ಸಚಿವ ಗಡ್ಕರಿ ಅವರಿಗೆ ಪತ್ರ ಬರೆದು ವಿವರಿಸುವುದಾಗಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನ ಮಾಡಿಕೊಂಡಿದ್ದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.

ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಒಟ್ಟು 45 ಕಿ.ಮೀ.ನಲ್ಲಿ 35 ಕಿ.ಮೀ. ಹೆದ್ದಾರಿ ಕಾಮಗಾರಿ ಮುಗಿದಿದೆ. 10 ಕಿ.ಮೀ. ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ ಎಂದು ವಿವರಿಸಿದರು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ, ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸೂಚಿಸಿದರು.

ಕೆಸರಲ್ಲೇ ಗುಡ್ಡ ಕುಸಿತದ ಜಾಗವನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್‌ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT