ಶಾಲಾ, ಕಾಲೇಜುಗಳಲ್ಲಿ ಸಂಭ್ರಮ

ಹಾಸನ: ಎಂಟು ತಿಂಗಳ ಬಳಿಕ ಶಾಲಾ, ಕಾಲೇಜುಗಳು ಶುಕ್ರವಾರದಿಂದ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗಳಿಗೆ ಹಾಜರಾದರು.
ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳನ್ನು ತಳಿರು–ತೋರಣಗಳಿಂದ ಸಿಂಗರಿಸಿ, ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಕೆಲ ಶಾಲೆಗಳಲ್ಲಿ ಮಕ್ಕಳಿಗೆ ಸಿಹಿ ಹಂಚಿ, ಗುಲಾಬಿ ಹೂ ನೀಡಿ ಬರಮಾಡಿಕೊಳ್ಳಲಾಯಿತು. ಕೆಲವೆಡೆ ಪೋಷಕರೇ, ಮಕ್ಕಳನ್ನು ಶಾಲೆಗೆ ಕರೆತಂದು ಬಿಟ್ಟು ಹೋದರು.
ಶೇಕಡಾ 70ರಷ್ಟು ಮಕ್ಕಳ ಹಾಜರಾತಿ ಇತ್ತು. ಕಾಲೇಜುಗಳಲ್ಲಿ ಶೇಕಡಾ 48ರಷ್ಟು ಹಾಜರಾತಿ ಕಂಡು ಬಂತು. ಶಾಲಾ, ಕಾಲೇಜುಗಳಲ್ಲಿ ಕೋವಿಡ್ ನಿಯಮ ಪಾಲಿಸಿ, ಸ್ವಚ್ಛತೆಗೆ ಆದ್ಯತೆ ನೀಡಲಾಯಿತು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ನಡೆದರೆ, 6 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾಗಮ ನಡೆಯಿತು.
ಪ್ರವೇಶ ದ್ವಾರದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿದರು. ಎಲ್ಲರೂ ಮಾಸ್ಕ್ ಧರಿಸಿದ್ದರು. ವಿದ್ಯಾರ್ಥಿಗಳು ತಂದಿದ್ದ ಪೋಷಕರ ಒಪ್ಪಿಗೆ ಪತ್ರವನ್ನು ಸಿಬ್ಬಂದಿ ಪರಿಶೀಲಿಸಿ ತರಗತಿಗೆ ಪ್ರವೇಶ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಪ್ರಕಾಶ್, ಶಿಕ್ಷಣಾಧಿಕಾರಿ ತಮ್ಮಣ್ಣಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಲರಾಂ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸಮೂರ್ತಿ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ 509 ಪ್ರೌಢಶಾಲೆಗಳಲ್ಲಿ ಒಟ್ಟು 21,874 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಶೇಕಡಾ 70 ರಷ್ಟು ಮಕ್ಕಳು ತರಗತಿಗೆ ಹಾಜರಾದರು. 1 ರಿಂದ 10ನೇ ತರಗತಿವರೆಗೆ 2.16 ಲಕ್ಷ ವಿದ್ಯಾರ್ಥಿಗಳಿದ್ದಾರೆ. 170 ಪದವಿ ಪೂರ್ವ ಕಾಲೇಜುಗಳ 13,600 ವಿದ್ಯಾರ್ಥಿಗಳಿದ್ದು, ಶೇಕಡಾ 48 ಹಾಜರಾಗಿದ್ದರು.
ನಗರದ ಗಂಧದ ಕೋಠಿ ಆವರಣದಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಧಾನ ಕಾಲೇಜು ತರಗತಿಗಳು ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು ಗುಂಪು ಗುಂಪಾಗಿ, ಅಂತರ ಪಾಲನೆ ಮರೆತು ಸಾಗಿದರು.
ನಗರದ ಎಸ್. ಆರ್. ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಸರಸ್ವತಿ ಪೂಜೆ ನೆರವೇರಿಸಿ, ತರಗತಿ ಶುಭಾರಂಭ ಮಾಡಲಾಯಿತು. ಶಿಕ್ಷಕ ವೃಂದದವರು ಗುಲಾಬಿ ಹೂ ನೀಡಿ ಮಕ್ಕಳನ್ನು ಸ್ವಾಗತಿಸಿದರು.
‘ಪ್ರತಿ ಕಾಲೇಜಿನಲ್ಲಿ ಐಸೋಲೇಷನ್ ಕೊಠಡಿ ನಿರ್ಮಿಸಲಾಗಿದೆ. ವಿದ್ಯಾರ್ಥಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸುವಂತೆ ಸಹಾಯವಾಣಿ ಸಂಖ್ಯೆ ನೀಡಲಾಗಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸಮೂರ್ತಿ ತಿಳಿಸಿದರು.
‘ಜಿಲ್ಲೆಯಲ್ಲಿ ಮೊದಲ ದಿನ ಶೇಕಡಾ 70 ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ವಿದ್ಯಾರ್ಥಿ ನಿಲಯಗಳು ಆರಂಭವಾಗಿದೆ. ಸೋಮವಾರದ ನಂತರ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಲಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಪ್ರಕಾಶ್ ಹೇಳಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.