ಗುರುವಾರ , ಮಾರ್ಚ್ 30, 2023
32 °C

ರಸ್ತೆಯಲ್ಲಿ ನಿಂತು ಹೋರಾಟ ಮಾಡಿದರೆ ಸಮಸ್ಯೆ ಬಗೆಹರಿಯಲ್ಲ: ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.

‘ಉತ್ತರ ಪ್ರದೇಶದ ಲಿಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಸಮಿತಿ ರಚನೆ ಮಾಡಲಾಗಿದೆ. ವರದಿಯ ನಂತರ ಸತ್ಯಾಸತ್ಯತೆ ಹೊರ ಬೀಳಲಿದೆ. ನಂತರವಷ್ಟೇ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ವರದಿಗಾಗಿ ಕಾಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

‘ಉತ್ತರ ಪ್ರದೇಶ, ಪಂಜಾಬ್‌ನಲ್ಲಿ ಮುಂಬರುವ ದಿನಗಳಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆ‌ಸ್‌ ಮತ್ತು ಸಮಾಜವಾದಿ ಪಕ್ಷಗಳು ಈ ರೀತಿಯ ಘಟನೆಯಲ್ಲಿ ರಾಜಕೀಯ ಮಾಡಲಾಗುತ್ತಿದೆ‌. ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ಷಡ್ಯಂತರ ನಡೆಸುತ್ತಿವೆ’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು