ಶುಕ್ರವಾರ, ಜುಲೈ 30, 2021
24 °C
ಸೋಂಕಿತರನ್ನು ಕಡ್ಡಾಯವಾಗಿ ಸಿಸಿ ಕೇಂದ್ರಕ್ಕೆ ದಾಖಲಿಸಿ : ಡಿ.ಸಿ

ಮೂರನೇ ಅಲೆ ಸಿದ್ಧತೆಗೆ ಗಮನಹರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಅಗತ್ಯ ಸಿದ್ಧತೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ 19 ಕುರಿತು ಗುರುವಾರ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆಯಾಗುತ್ತಿಲ್ಲ. ಆದ್ದರಿಂದ ಕೋವಿಡ್ ಕೇರ್ ಸೆಂಟರ್ ಗಳಿಗೆ ಕರೆ ತಂದು ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

ಶೇಕಡಾ 20ಕ್ಕಿಂತ ಅಧಿಕ ಸೋಂಕು ಇರುವ ಗ್ರಾಮಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಈ ಹಿಂದೆ ಪಾಸಿಟಿವ್ ಬಂದಿರುವವರನ್ನು ಹೋಂ ಐಸೋಲೇಶನ್ ನಲ್ಲಿರಿಸಬೇಕು ಜೊತೆಗೆ ಸೋಂಕಿತರ ಕುಟುಂಬದವರನ್ನೂ ರ್‍ಯಾಟ್‌ ಪರೀಕ್ಷೆಗೊಳಪಡಿಸಬೇಕು. ನಂತರ ಆರ್‌ಟಿ–ಪಿಸಿಆರ್‌ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಗಳಲ್ಲಿ ಶುಚಿತ್ವ, ಮಾಸ್ಕ್‌, ಸ್ಯಾನಿಟೈಸರ್ ಜೊತೆಗೆ ಅಂತರ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಆರ್‌ಟಿ–ಪಿಸಿಆರ್ ಪರೀಕ್ಷೆ ಗುರಿ ಹೆಚ್ಚಿಸುವುದರ ಜೊತೆಗೆ ಲಸಿಕೆ ತೆಗೆದುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. 

ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ 3ನೇ ಸುತ್ತಿನ ತಪಾಸಣೆ ಮುಂದಿನ ದಿನಗಳಲ್ಲಿ ಪೂರ್ಣಗೊಳಿಸುವಂತೆ ಆದೇಶಿಸಿದ ಅವರು, ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದೆ, ಅಂತರ ಪಾಲನೆ ಮಾಡದೆ ಓಡಾಡುತ್ತಿದ್ದಾರೆ. ಕಸ ಸಂಗ್ರಹ ವಾಹನಗಳಲ್ಲಿ ಧ್ವನಿವರ್ದಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.

ವಿಡಿಯೋ ಸಂವಾದದ ಮೂಲಕ ಮಾತನಾಡಿ ಶಾಸಕ ಎಚ್.ಡಿ ರೇವಣ್ಣ, ಹೊಳೆನರಸೀಪುರದ ತಾಲ್ಲೂಕು ಮಕ್ಕಳ ಆಸ್ಪತ್ರೆಗಳಲ್ಲಿ ಬೆಡ್‍ಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಅದಕ್ಕೆ ಬೇಕಾಗುವ ತಾಂತ್ರಿಕತೆಗಳ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರ ಜೊತೆಯಲ್ಲಿ ಗ್ರಾಮೀಣ ಭಾಗದ ಸ್ವ ಸಹಾಯ ಸಂಘಗಳ ಸಹಕಾರ ಪಡೆದುಕೊಳ್ಳುವಂತೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಆರ್.ಸಿ ಎಚ್ ಅಧಿಕಾರಿ ಡಾ. ಕಾಂತರಾಜು, ಮಕ್ಕಳ ತಜ್ಞ ಡಾ. ಮನುಪ್ರಕಾಶ್ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು