ಭಾನುವಾರ, ಜನವರಿ 17, 2021
28 °C
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ

ಗಣಿ ಬಾಧಿತ ಪ್ರದೇಶಗಳಲ್ಲಿ ಸಾಮಾಜಿಕ ಅಭಿವೃದ್ಧಿ ಕಾರ್ಯ; ರೋಹಿಣಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಗಣಿ ಬಾಧಿತ ಪ್ರದೇಶಗಳಲ್ಲಿ ಅತ್ಯಂತ ಅಗತ್ಯವಿರುವ ಸಾಮಾಜಿಕ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಗಳ ಅನುಷ್ಠಾನ ಕುರಿತ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ₹ 3.46 ಕೋಟಿ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಅದರಂತೆ ಕಾಮಗಾರಿಗಳನ್ನು ಬೇಗನೆ ಮುಕ್ತಾಯಗೊಳಿಸುವಂತೆ ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಈಗಾಗಲೇ ಗುರುತಿಸಲ್ಪಟ್ಟಿರುವ ಗಣಿ ಬಾಧಿತ ಪ್ರದೇಶದಲ್ಲಿ ಅಂಗನವಾಡಿ, ಶಾಲಾ, ಕಾಲೇಜುಗಳ ದುರಸ್ತಿ ಆಸ್ಪತ್ರೆ, ಅಭಿವೃದ್ಧಿ ರಸ್ತೆ ಕುಡಿಯುವ ನೀರು ಪೂರೈಕೆ ಯೋಜನೆಗಳ ಅನುಷ್ಠಾನ ಹಾಗೂ ಸಾಮಾಜಿಕ ಅರಣ್ಯ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಈ ವರೆಗೂ ಹರಾಜಾಗದ 13 ಮರಳು ನಿಕ್ಷೇಪಗಳನ್ನು ಮೈಸೂರು ಮಿನರಲ್ ಲಿಮಿಟೆಡ್‍ಗೆ ವಹಿಸಿ ಪ್ರತಿ ಲೋಡ್ ಗೆ ದರ ನಿಗದಿ ಪಡಿಸಿ ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಡಿ.ಸಿ ಹೇಳಿದರು.

ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಕಾರ್ಯಪಾಲಕ ಎಂಜಿನಿಯರ್‌ಗಳು ತಮಗೆ ಈ ವರ್ಷಗಳ ಯೋಜಿತ ಕಾಮಗಾರಿಗಳಿಗೆ ಅಗತ್ಯವಿರುವ ಮರಳಿನ ಪ್ರಮಾಣವನ್ನು ಮೊದಲೇ ತಿಳಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ. ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು ಎಲ್ಲಾ ಗಣಿಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸಬೇಕು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಎ.ಎನ್ ಪ್ರಕಾಶ್ ಗೌಡ, ಅಕ್ರಮ ಮರಳು ಗಣಿಗಾರಿಕೆ ತಡೆಗೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ, ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳನ್ನು ಈ ಬಗ್ಗೆ ನಿಗಾವಹಿಸಲು ತಿಳಿಸಲಾಗಿದೆ ಎಂದರು.

ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು