ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಸದ್ಯಕ್ಕೆ ಸಂಪೂರ್ಣ ಲಾಕ್‍ಡೌನ್ ಬೇಡ, ಡಿಸಿಗೆ ಸಿಎಂ ಸೂಚನೆ

ಪರಿಸ್ಥಿತಿ ನೋಡಿ ನಂತರ ನಿರ್ಧರಿಸಿ
Last Updated 13 ಜುಲೈ 2020, 16:34 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ದಿನನಿತ್ಯ ಬಹುತೇಕ ಭಾಗಶಃ ಲಾಕ್‍ಡೌನ್ ಆಗುತ್ತಿರುವ ಕಾರಣ ಸದ್ಯಕ್ಕೆ ಸಂಪೂರ್ಣ ಲಾಕ್‍ಡೌನ್
ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜತೆ ವಿಡಿಯೊ ಸಂವಾದ ನಡೆಸಿ, ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ, ಈ ವಾರದ ಪರಿಸ್ಥಿತಿ ನೋಡಿಕೊಂಡು ನಂತರವಷ್ಟೇ ಹಾಸನದಲ್ಲಿ ಸಂಪೂರ್ಣ ಲಾಕ್‍ಡೌನ್ ಬಗ್ಗೆ ನಿರ್ಧರಿಸಬಹುದು ಎಂದು ನಿರ್ದೇಶನ ನೀಡಿದರು.

ಕೊರೊನಾ ವಿಚಾರದಲ್ಲಿ ಯಾವುದೇ ಜಿಲ್ಲೆಯ ಅಧಿಕಾರಿಗಳು ಮೈಮರೆಯಬಾರದು, ಆಯಾ ಜಿಲ್ಲೆಯ ಸುರಕ್ಷತೆಯ ಸಲುವಾಗಿ ಅಗತ್ಯವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರವಿದೆ. ಹಾಗಾಗಿ ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ರೈತರಿಗೆ ಬೇಕಾದ ಸವಲತ್ತುಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಏನೇ ಸಮಸ್ಯೆಗಳಿದ್ದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರನ್ನು ಸಂಪರ್ಕಿಸಬೇಕು ಎಂದರು.

ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಾತನಾಡಿ ಜಿಲ್ಲಾಡಳಿತ ಕೊವೀಡ್ 19 ಅನ್ನು ವ್ಯವಸ್ಥಿತವಾಗಿ ನಿಭಾಯಿಸುತ್ತಿದೆ. ಸೋಂಕು ನಿಯಂತ್ರಣಕ್ಕೆ ಎಲ್ಲ ರೀತಿಯ ಮುಂಜಾಗ್ರತೆ ವಹಿಸುತ್ತಿದೆ.ಕೋವಿಡ್‌ ಆಸ್ಪತ್ರೆಗೆ ಹೆಚ್ಚುವರಿ 200 ಹಾಸಿಗೆಗಳು ಅಗತ್ಯವಿದ್ದು, ಶೀಘ್ರವಾಗಿ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿವರಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾತನಾಡಿ, ಕೋವಿಡ್‌ ಆಸ್ಪತ್ರೆಗಳಲ್ಲಿ ನಿಗದಿತ ಪ್ರಮಾಣದಲ್ಲಿ ಚಿಕಿತ್ಸೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ. ಕೊವೀಡ್-19 ಚಿಕಿತ್ಸೆಗಾಗಿ ಗುರುತಿಸಿರುವ ಖಾಸಗಿ ಆಸ್ಪತ್ರೆಗಳು ಸರಿಯಾದ ವಿಧಾನದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡದಿದ್ದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕುರಿತು ಮುಖ್ಯಮಂತ್ರಿಗೆ ವರದಿ ನೀಡಿ, ಪ್ರಸ್ತುತ ಪರಿಸ್ಥಿತಿ ವಿವರಿಸಿದರು. ಕೋವಿಡ್‌ ಅಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜರಾಂ, ಉಪ ವಿಭಾಗಾಧಿಕಾರಿಗಳಾದ ನವೀನ್ ಭಟ್ ಮತ್ತು ಗಿರೀಶ್ ನಂದನ್, ಹಿಮ್ಸ್ ನಿರ್ದೇಶಕ‌ ಡಾ. ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ, ಸತೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT