ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಕಡಿತ ಬೇಡ: ಎಚ್‌.ಡಿ.ರೇವಣ್ಣ

Last Updated 16 ಏಪ್ರಿಲ್ 2020, 17:18 IST
ಅಕ್ಷರ ಗಾತ್ರ

ಹಾಸನ: ರಾಜ್ಯದ ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯ ತಲಾ ₹2 ಕೋಟಿ ಅನುದಾನವನ್ನು ಕಡಿತ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಪುನರ್‌ ಪರಿಶೀಲನೆ ಮಾಡುವುದು ಅಗತ್ಯ ಎಂದು ಶಾಸಕ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.‌

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಾಸಕರು, ವಿಧಾನಪರಿಷತ್‌ ಸದಸ್ಯರಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಿದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ರೈತರು ಸಂಕಷ್ಟದಲ್ಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿ ಜಿಲ್ಲೆಗೆ ₹5 ಕೋಟಿಯಂತೆ ₹150 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲದೆ ಬಿಡಿಎ ನಿವೇಶನಗಳನ್ನು ಮಾರಾಟ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ. ನಿವೇಶನಗಳನ್ನು ಮಾರಾಟ ಮಾಡುವ ಪರಿಸ್ಥಿತಿಸರ್ಕಾರಕ್ಕೆ ಬಂದಿದ್ದರೆ ಗುತ್ತಿಗೆದಾರರಿಗೆ ನೀಡುವ ಸಾವಿರಾರು ಕೋಟಿ ರೂಪಾಯಿ ಬಿಲ್‌ಗಳನ್ನು 6 ತಿಂಗಳು ನಿಲ್ಲಿಸಲಿ. ರಾಜ್ಯದ ಹಣಕಾಸಿನ ಪರಿಸ್ಥಿತಿ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು. ಈ ಮೂಲಕ ರಾಜ್ಯದಲ್ಲಿ ಸಂಗ್ರಹವಾಗಿರುವ ತೆರಿಗೆ ಹಣ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬರುತ್ತಿರುವ ಹಣ ಏನಾಗಿದೆ ಎಂಬುದರ ಬಗ್ಗೆ ಜನರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT