ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ತುಂಬಿಸಿದರೆ ರೈತರಿಗೆ ಅನುಕೂಲ: ಶಾಸಕ ರೇವಣ್ಣ

ನೀರಾವರಿ ಸಲಹಾ ಸಮಿತಿ ಸಭೆಗೆ ಆಗ್ರಹ
Last Updated 23 ಜುಲೈ 2020, 13:33 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ಹೇಮಾವತಿ ಮತ್ತು ಯಗಚಿ ಜಲಾಶಯ ಭರ್ತಿ ಅಂಚಿಗೆ ತಲುಪಿದ್ದು, ನಾಲೆ ಮತ್ತು ನದಿಗೆ ನೀರು ಬಿಡುವ ಮೊದಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು ಎಂದು ಶಾಸಕ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಹೇಮಾವತಿ ಜಲಾಶಯದಲ್ಲಿ ಪ್ರಸ್ತುತ 16 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಬಳಕೆಗೆ 12 ಟಿಎಂಸಿ ಅಡಿ ನೀರು ಸಿಗಲಿದೆ. ಯಗಚಿ ಜಲಾಶಯ ಭರ್ತಿಗೆ ಇನ್ನು 2 ಅಡಿ ಬಾಕಿ ಇದೆ. ಮೂಡಿಗೆರೆ ಸೇರಿದಂತೆ ಜಲಾನಯನ ಭಾಗದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಆದ್ದರಿಂದ ನಾಲೆಗಳ ಮೂಲಕ ನೀರು ಹರಿಸಿ, ಕೆರೆಗಳನ್ನು ತುಂಬಿಸಿದರೆ ಸಂಕಷ್ಟ ಅನುಭವಿಸಿದ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಆಗಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.

12 ತಿಂಗಳಿನಿಂದ ಕಾವೇರಿ ಕೊಳ್ಳದಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಕಾಮಗಾರಿಗಳು ಸ್ಥಗಿತಗೊಂಡಿವೆ. ಪೊಲೀಸರನ್ನು ನಿಯೋಜಿಸಿ ನಾಲೆ ತೂಬುಗಳನ್ನು ಮುಚ್ಚಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಟೆಂಡರ್‌ ಪೂರ್ಣಗೊಂಡಿದ್ದ ಅನೇಕ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದೆ. ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಬೇರೆ ಜಿಲ್ಲೆಗಳಿಗೆ ಕಿಟ್‌ಗಳನ್ನು ನೀಡಿದೆ. ಆದರೆ ಹಾಸನಕ್ಕೆ ಕೊಟ್ಟಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನಾದರೂ ದ್ವೇಷದ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.

ಹಿಂದಿನ ಸಮ್ಮಿಶ್ರ ಸರ್ಕಾರ ಪತನವಾಗಿ 12 ತಿಂಗಳು ಕಳೆದಿದೆ. ಕಳೆದ ವರ್ಷದ ಶಾಸಕರ ಪ್ರದೇಶಾಭಿವೃದ್ಧಿ ಅನುದಾನವನ್ನೇ ನೀಡಿಲ್ಲ. ಬೇಕಾದ ಶಾಸಕರಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದು ಅವಶ್ಯಕತೆ ಇರಲಿಲ್ಲ. ಈ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆದು ಮೊದಲಿನಂತೆಯೇ ಇರಲು ಬಿಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಘೋಷಣೆ ಮಾಡಿದ ₹1610 ಕೋಟಿ ಪ್ಯಾಕೇಜ್‌ ಹಣ ಇನ್ನೂ ಫಲಾನುಭವಿಗಳಿಗೆ ದೊರೆತಿಲ್ಲ. ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ವಿತರಣೆ ಮಾಡಿದರೆ ಸಾಲದು. ಅಸಂಘಟಿತ ವಲಯಗಳಾದ ಕ್ಷೌರಿಕರು, ಅಗಸರು, ಆಟೊ, ಟ್ಯಾಕ್ಸಿ ಚಾಲಕರು, ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT