ಶನಿವಾರ, ಏಪ್ರಿಲ್ 1, 2023
29 °C

ವರ್ಷದಲ್ಲಿ 4,685 ಮನೆ ನಿರ್ಮಾಣ: ಸಚಿವ ಕೆ.ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ವಸತಿ ಯೋಜನೆಯಡಿ 2021-22 ನೇ ಸಾಲಿಗೆ ಜಿಲ್ಲೆಯಲ್ಲಿ 4,685 ಫಲಾನುಭವಿಗಳಿಗೆ ಮನೆ ನಿರ್ಮಾಣ
ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಯವ ಸಂದೇಶ ನೀಡಿದ ಸಚಿವರು, ವಸತಿ ಯೋಜನೆ ಅಡಿ ಮನೆ ನಿರ್ಮಾಣಕ್ಕೆ ಈವರೆಗೆ ₹ 22.36 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 267 ಗ್ರಾಮ ಪಂಚಾಯಿತಿಗಳಲ್ಲೂ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ಗುರಿ ಹೊಂದಿದ್ದು, 242 ಗ್ರಾಮ ಪಂಚಾಯಿತಿಗಳಲ್ಲಿ ವಿಸ್ತ್ರತ ಯೋಜನಾ ವರದಿ (ಡಿಪಿಆರ್ ) ಅನುಮೋದನೆಗೊಂಡಿದೆ. ಗ್ರಾಮ ಪಂಚಾಯಿತಿಗಳಿಗೆ ₹ 8.2 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಜಿಲ್ಲೆಯಲ್ಲಿ 31 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಿದ್ದು, ಆಯಾ ಗ್ರಾಮ ಪಂಚಾಯಿತಿಗಳ ಮೂಲ ಸೌಕರ್ಯ ಅಭಿವೃದ್ದಿಗೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ 2021-22ನೇ ಸಾಲಿಗೆ ವಾರ್ಷಿಕ 34 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಿದ್ದು, ಈವರೆಗೆ 41.80 ಲಕ್ಷ ಮಾನವ ದಿನಗಳನ್ನು ಸೃಜಿಸಿ, ಶೇ 123
ರಷ್ಟು ಪ್ರಗತಿ ಸಾಧಿಸಿ ರಾಜ್ಯದ ಪ್ರಗತಿಯಲ್ಲಿ 2ನೇ ಸ್ಥಾನ ಕಾಯ್ದುಕೊಳ್ಳಲಾಗಿದೆ. ಆರ್ಥಿಕವಾಗಿ ₹ 154.76
ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿದ್ದು, ಮೂಲ ಸೌಕರ್ಯ, ದುರಸ್ತಿ ಮತ್ತಿತರ ಕಾರ್ಯಗಳಿಗೆ ಜಿಲ್ಲೆಗೆ ಒಟ್ಟು ₹ 48 ಕೋಟಿ ಅನುದಾನ ಒದಗಿಸಲಾಗಿದೆ. ಎರಡು ವರ್ಷಗಳಲ್ಲಿ 40,782 ರೈತರಿಗೆ ₹ 50 ಕೋಟಿ ಬೆಳೆ ಹಾನಿ ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.

ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕ ದಳ, ಅಬಕಾರಿ ತಂಡ, ಅರಣ್ಯ ಇಲಾಖೆ, ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಘಟಕ, ಸಶಸ್ತ್ರ ಮೀಸಲು ಪಡೆ ನಡೆದ ಪಥ ಸಂಚಲನ ಆಕರ್ಷಕವಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ. ಪರಮೇಶ್, ನಗರ ಸಭೆ ಅಧ್ಯಕ್ಷ ಆರ್‌. ಮೋಹನ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈ. ಕೃಷ್ಣೆಗೌಡ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿನೋದ್‌ ಚಂದ್ರ, ಆಯುಷ್‌ ಅಧಿಕಾರಿ ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು