ಗುರುವಾರ , ಆಗಸ್ಟ್ 18, 2022
24 °C
ಎಚ್‍ಆರ್‌ಪಿ ಸಂತ್ರಸ್ತರಿಗೆ ಭೂಮಿ ನೀಡಿ

ಅಕ್ರಮ ಕಲ್ಲು, ಮರಳು ಗಣಿಗಾರಿಕೆ ತಡೆಗೆ ಆಗ್ರಹ: ಹೊನ್ನವಳ್ಳಿ ಗಣೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಆಲೂರು ತಾಲ್ಲೂಕಿನಲ್ಲಿ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ನಿಲ್ಲಿಸದಿದ್ದರೆ ಹಾಗೂ ಹೇಮಾವತಿ ಜಲಾಶಯ ಯೋಜನೆ (ಎಚ್ಆರ್‌ಪಿ) ಮುಳುಗಡೆ ಸಂತ್ರಸ್ತರಿಗೆ ಭೂಮಿ ಮಂಜೂರು ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಮಾಡಲಾಗುವುದು ಎಂದು ಕಾಂಗ್ರೆಸ್‍ ಮುಖಂಡ ಹೊನ್ನವಳ್ಳಿ ಗಣೇಶ್ ಎಚ್ಚರಿಕೆ ನೀಡಿದರು.

ಆಲೂರು ತಾಲ್ಲೂಕು ಕೆಂಚಮ್ಮನ ಹೊಸಕೋಟೆ ಹೋಬಳಿಯಲ್ಲಿ ಅಕ್ರವಾಗಿ ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಸ್ಫೋಟದ ತೀವ್ರತೆಗೆ ಕಾಡು ಪ್ರಾಣಿಗಳು ಗ್ರಾಮಗಳತ್ತ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕಾಡಾನೆಗಳು ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಸಾವು, ನೋವುಗಳು ಸಂಭವಿಸಿವೆ. ಬೆಳೆ ಹಾನಿ ಲೆಕ್ಕಕ್ಕೆ ಸಿಗದಂತಾಗಿದೆ. ಇದಕ್ಕೆ ಮರಳು ಹಾಗೂ ಕಲ್ಲು ಗಣಿಗಾರಿಕೆ ಪ್ರಮುಖ ಕಾರಣ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕೊಡಗು ಜಿಲ್ಲೆಗೆ ಹೋಗುವ ಮಾರ್ಗದಲ್ಲಿಯೇ ಮರಳು ಗಣಿಗಾರಿಕೆ ನಡೆಯುತ್ತಿರುವ ಕಾರಣ ಆಲೂರು ತಾಲ್ಲೂಕಿನಿಂದ ಕಾಡಾನೆಗಳು ಮಡಿಕೇರಿಗೆ ಹೋಗಲು ಆಗದೆ, ಗ್ರಾಮಗಳಲ್ಲಿ ಸಂಚಾರ ಮಾಡುತ್ತಿವೆ. ಇದನ್ನು ತಡೆಯಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಕೆಂಚಮ್ಮನ ಹೊಸಕೋಟೆ ಹೋಬಳಿಯಲ್ಲಿಯೇ ಸಾಕಷ್ಟು ಮುಳುಗಡೆ ಸಂತ್ರಸ್ತರಿದ್ದು, ಇದುವರೆಗೂ ಭೂಮಿ ಸಿಕ್ಕಿಲ್ಲ. ನೈಜ ಸಂತ್ರಸ್ತರಿಗೆ ಮಂಜೂರಾದ ಜಮೀನನ್ನು ಜಿಲ್ಲಾಧಿಕಾರಿ ಯಾವ ಕಾರಣಕ್ಕೆ ತಡೆ ಹಿಡಿದಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ಹಗರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಕ್ರಮ ಮಾಡಿರುವವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಜಿಲ್ಲಾಧಿಕಾರಿ ವಾಸ್ತವ ಅರಿತು ನಿಜವಾದ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಬೇಕು. ಇಲ್ಲವಾದರೆ ಕೋವಿಡ್ ಲಾಕ್‍ಡೌನ್ ಮುಗಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೇಂದ್ರದ ಬಿಜೆಪಿ ಸರ್ಕಾರ ಇಂಧನ, ರಸಗೊಬ್ಬರ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ಸರ್ಕಾರ ಬೆಲೆ ಏರಿಕೆ ಇಳಿಕೆ ಮಾಡಬೇಕು. ಸಂಸದ, ಹಾಸನ ಜಿಲ್ಲಾ ಉಸ್ತುವಾರಿ ಡಿ.ಕೆ.ಸುರೇಶ್ ಬುಧವಾರ ಹಾಸನಕ್ಕೆ ಭೇಟಿ ನೀಡುತ್ತಿದ್ದು, ಜಿಲ್ಲಾ ಕಾಂಗ್ರೆಸ್‍ನಿಂದ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು