ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಡಿಎಸ್‌ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಎಚ್‌.ಡಿ. ರೇವಣ್ಣ

ಬೇಲೂರಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Published : 16 ಸೆಪ್ಟೆಂಬರ್ 2024, 15:41 IST
Last Updated : 16 ಸೆಪ್ಟೆಂಬರ್ 2024, 15:41 IST
ಫಾಲೋ ಮಾಡಿ
Comments

ಬೇಲೂರು: ಜೆಡಿಎಸ್ ಮುಗಿಸಲು ಈ ಹಿಂದೆ ಅನೇಕ ಪ್ರಯತ್ನಗಳು ನಡೆದಿವೆ. ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ. ನಡೆದಿರುವ ಎಲ್ಲ ಕಹಿ ಘಟನೆಗಳನ್ನು ಮರೆತು ಸಂಘಟಿತರಾಗಿ ಜಿಲ್ಲೆಯಲ್ಲಿ ಜೆಡಿಎಸ್‌ನ ಹೊಸ ಅಧ್ಯಾಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಮುಗಿದಿಲ್ಲ. ನಮ್ಮ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಇಂದಿನಿಂದ ಹೊಸ  ಅಧ್ಯಾಯ ಆರಂಭವಾಗಿದೆ ಎಂದರು.

ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಅದರಂತೆ ಇಲ್ಲಿನ ಚನ್ನಕೇಶವನ ಸನ್ನಿಧಿಯಿಂದ ಸದಸ್ಯತ್ವ ಅಭಿಯಾನವನ್ನು ಇಂದಿನಿಂದ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸಿ ಜೆಡಿಎಸ್‌ಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದರು.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರ ಸಲಹೆ ಜೊತೆಗೆ ಅವರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಹಿಂದಿನ ಲೋಪದೋಷ ಸರಿಪಡಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು ಎಂದರು.

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ. ದೇವೇಗೌಡರ ಕಾಲದಿಂದಲೂ ಜೆಡಿಎಸ್ ಅನೇಕ ಸಮಸ್ಯೆಗಳನ್ನು ಎದುರಿಸಿದೆ. ಮುಂದೆಯೂ ಅದೆಷ್ಟೇ ಸವಾಲುಗಳು ಎದುರಾದರೂ ಕಾರ್ಯಕರ್ತರು ಅವೆಲ್ಲವನ್ನು ಮೆಟ್ಟಿ ನಿಂತು ಎದುರಿಸುವ, ಪಕ್ಷ ಬಲ ವರ್ಧನೆ ಮಾಡುವ ಅಗತ್ಯವಿದೆ ಎಂದರು.

ಶಾಸಕ ಎ.ಮಂಜು, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಲಿಂಗೇಶ್, ಬೇಲೂರು ತಾಲ್ಲೂಕು ಘಟಕದ ಅಧ್ಯಕ್ಷ ಅನಂತ ಸುಬ್ಬರಾಯ, ಮುಖಂಡರಾದ ಇಂದಿರಮ್ಮ, ಭಾರತಿ ಅರುಣ್ ಕುಮಾರ್, ಜಾವಗಲ್ ರಾಜಶೇಖರ್, ಮರಿಯಪ್ಪ ದೊಡ್ಡ ವೀರೇಗೌಡ, ಮೋಹನ್ ಕುಮಾರ್, ಎಂ.ಎ.ನಾಗರಾಜ್, ಚಂದ್ರೇಗೌಡ, ರಂಗೇಗೌಡ, ಅಶ್ವತ್, ರವಿ, ಶ್ರೀನಿಧಿ, ಮಲ್ಲೇಗೌಡ, ಚಂದ್ರೇಗೌಡ, ಕಾಂತರಾಜು, ರಾಮಚಂದ್ರ, ಬಸವರಾಜ್, ನಾಗೇಶ್, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಮೊದಲಾದವರಿದ್ದರು.

ಹೆಚ್ಚು ಸದಸ್ಯರು ನೋಂದಣಿ ಮಾಡಿಕೊಳ್ಳುವ ಮೂಲಕ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಲಪಡಿಸಬೇಕು. ಮುಂದೆ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸನ್ನದ್ಧರಾಗಬೇಕು.
-ಎಚ್.ಡಿ.ರೇವಣ್ಣ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT