ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸೌಲಭ್ಯ ಬಳಸಿ ಸಬಲರಾಗಿ

ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳಾ ಉದ್ದಿಮೆದಾರರ ಜಾಗೃತಿ ಶಿಬಿರ
Last Updated 28 ಮಾರ್ಚ್ 2018, 12:29 IST
ಅಕ್ಷರ ಗಾತ್ರ

ಗೌರಿಬಿದನೂರು: ‘ಉದ್ದಿಮೆದಾರರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ’ ಎಂದು ವಿಧಾನಸಭಾ ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಮಹಿಳಾ ಉದ್ದಿಮೆದಾರರ ಜಾಗೃತಿ ಶಿಬಿರ’ದಲ್ಲಿ ಅವರು ಮಾತನಾಡಿದರು.

‘ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಸರ್ಕಾರ ನೀಡುವ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕಿದೆ. ತಾಲ್ಲೂಕಿನಲ್ಲಿರುವ ಯುವಜನತೆಗೆ ಹೆಚ್ಚು ಹೆಚ್ಚು ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಕುಡುಮಲಕುಂಟೆ ಕೈಗಾರಿಕಾ ಪ್ರದೇಶವನ್ನು ಅಭಿವೃದ್ದಿಪಡಿಸಲಾಗಿದೆ’ ಎಂದು ತಿಳಿಸಿದರು.

‘ಯುವಕರಿಗೆ ಉದ್ಯೋಗಾಧಾರಿತ ಕೌಶಲಗಳ ತರಬೇತಿ ನೀಡುವ ಉದ್ದೇಶವಿದೆ. ದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ನೋಟು ಅಮಾನೀಕರಣ ಮತ್ತು ಜಿಎಸ್ ಟಿ ಜಾರಿಯಾದ ಕಾರಣ ಉದ್ಯೋಗವಕಾಶಗಳು ಕ್ಷೀಣಿಸುತ್ತಿದ್ದು, ಆರ್ಥಿಕ ವ್ಯವಸ್ಥೆ ಹದಗೆಡುತ್ತಿದೆ’ ಎಂದರು.

ಭಾರತೀಯ ದಲಿತ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ (ಡಿಐಸಿಸಿಐ) ರಾಜ್ಯ ಘಟಕದ ಅಧ್ಯಕ್ಷ ರಾಜಾ ನಾಯಕ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡಿರುವ ಮೀಸಲಾತಿ ಮುಂದಿನ ಹತ್ತಾರು ದಶಕಗಳವರೆಗೂ ವಿಸ್ತರಿಸಿದರೂ ಅವರ ಆರ್ಥಿಕ ಪರಿಸ್ಥಿತಿ ಸದೃಢವಾಗದು. ಮೊದಲು ಅವರಿಗೆ ಮೌಲ್ಯಾಧಾರಿತ ಶಿಕ್ಷಣ ಹಾಗೂ ಉದ್ಯೋಗವಕಾಶಗಳನ್ನು ಕಲ್ಪಿಸುವ ಅಗತ್ಯವಿದೆ’ ಎಂದು ಹೇಳಿದರು.

‘ಕೆಳವರ್ಗಗಳ ಜನರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಉದ್ಯಮಶೀಲರಾದರೆ ಮಾತ್ರ ಆರ್ಥಿಕವಾಗಿ ಸಬಲರಾಗುವ ಜತೆಗೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಸಾಧ್ಯವಾಗುತ್ತದೆ’ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಎನ್.ಚಿಕ್ಕೇಗೌಡ, ಮುಖಂಡರಾದ ಡಿ.ನರಸಿಂಹಮೂರ್ತಿ, ಎಚ್.ಎನ್.ಪ್ರಕಾಶರೆಡ್ಡಿ, ಸಿ.ಜಿ.ಶ್ರೀನಿವಾಸನ್, ಎಚ್.ಆರ್.ಗೋವಿಂದರಾಜು, ಪದ್ಮನಾಭ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎನ್.ಆರ್.ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT