ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್ಚರ ತಪ್ಪಿದರೆ ಸೋಂಕು ಹೆಚ್ಚಳ: ಸಚಿವ ಗೋಪಾಲಯ್ಯ ಎಚ್ಚರಿಕೆ

ಕರ್ನಾಟಕ ರಾಜ್ಯೋತ್ಸವ ಸಮಾರಂಭ
Last Updated 1 ನವೆಂಬರ್ 2020, 11:49 IST
ಅಕ್ಷರ ಗಾತ್ರ

ಹಾಸನ: ಯುಗಾದಿವರೆಗೂ ಸಾಲು ಸಾಲು ಹಬ್ಬಗಳು. ಸುಗ್ಗಿ, ಜಾತ್ರೆ, ಉತ್ಸವಗಳು ಬರುತ್ತಿವೆ. ಹಬ್ಬಗಳ ಆಚರಣೆ ಸಂಭ್ರಮದಲ್ಲಿ ಎಚ್ಚರ ತಪ್ಪಿದರೆ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಾಗುತ್ತದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಮತ್ತು ಕನ್ನಡ
ಧ್ವಜಾರೋಹಣ ನೆರವೇರಿಸಿದರು. ನಂತರ ತೆರೆದ ಜೀಪಿನಲ್ಲಿ ಸಂಚರಿಸಿ ಪೊಲೀಸ್‌ ತಂಡದಿಂದ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು.

ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ. ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಅಂತರ ಪಾಲನೆ, ಸ್ವಚ್ಛತೆ ಕಡೆ ಗಮನ ಹರಿಸಬೇಕು. ಪ್ರತಿಯೊಬ್ಬರು ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಸಹಭಾಗಿಗಳಾಗಬೇಕು ಎಂದು ಕರೆ ನೀಡಿದರು.

ಹಾಸನ ನಗರಕ್ಕೆ 24 ತಾಸು ಕುಡಿಯುವ ನೀರು ಪೂರೈಸುವ ಅಮೃತ್ ಯೋಜನೆಯ ಶೇಕಡಾ 90 ರಷ್ಟು ಕಾಮಗಾರಿ
ಪೂರ್ಣಗೊಂಡಿದ್ದು, ಹೆಚ್ಚುವರಿಯಾಗಿ ₹.24.3 ಕೋಟಿ ಅನುದಾನ ಮಂಜೂರಾಗಿದೆ. ಕುಡಿಯುವ ನೀರಿನ ಪೈಪ್ ಲೈನ್ ವಿತರಣಾ ಜಾಲ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಮುಂಗಾರಿನಲ್ಲಿ ಮಳೆಯಿಂದಾಗಿ ಆರು ತಾಲ್ಲೂಕಗಳಲ್ಲಿ ₹350 ಕೋಟಿ ನಷ್ಟ ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ₹40.66 ಕೋಟಿ ಪರಿಹಾರಕ್ಕೆ ವರದಿ ಸಲ್ಲಿಸಲಾಗಿದೆ. ಕೃಷಿ ಯಂತ್ರಧಾರೆ ಯೋಜನೆಯಡಿ ಒಟ್ಟು 21 ಬಾಡಿಗೆ ಆಧಾರಿತ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 6 ಕೇಂದ್ರಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020-21ನೇ ಸಾಲಿಗೆ ವಾರ್ಷಿಕ 55 ಲಕ್ಷ ಮಾನವ ದಿನಗಳ ಹಾಗೂ ₹267.2 ಕೋಟಿ ಆರ್ಥಿಕ ಗುರಿ ನಿಗದಿಪಡಿಸಲಾಗಿದೆ. ಶೇಕಡಾ 89 ರಷ್ಟು ಪ್ರಗತಿ ಸಾಧನೆ ಮಾಡಿದ್ದು, ₹103 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ 3.38 ಲಕ್ಷ ಶೌಚಾಲಯ ನಿರ್ಮಿಸಲು ₹22.92ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಪ್ರತಿ ಕುಟುಂಬಕ್ಕೆ ₹ 15 ಸಾವಿರ ಮತ್ತು ಇತರೆ ಜನಾಂಗದ ಪ್ರತಿ ಕುಟುಂಬಕ್ಕೆ ₹ 12 ಸಾವಿರ ಸಹಾಯಧನ ಪಾವತಿಸಲಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಗೀತೆಗಳ ಗಾಯನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ ನಾಡಿನ ಹಿರಿಮೆ ಸಾರುವ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.

ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿರುವ ಹಂಪನಹಳ್ಳಿ ತಿಮ್ಮೇಗೌಡ, ಅನುಸೂಯಮ್ಮ, ಜಿಲ್ಲಾ
ಮಟ್ಟದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಗಣ್ಯರು, ಸಾಧಕರು ಹಾಗೂ ಕೋವಿಡ್- 19 ವಿರುದ್ಧದ ಹೋರಾಟದಲ್ಲಿ ಸೇವೆ ಸಲ್ಲಿಸಿದ ಸರ್ಕಾರಿ, ಖಾಸಗಿ ವೈದ್ಯರು, ಅಧಿಕಾರಿ ಸಿಬ್ಬಂದಿ, ಪೋಲಿಸ್ ಅಧಿಕಾರಿಗಳು, ನಗರಸಭೆ ನೌಕರರು ಹಾಗೂ ರೈತರನ್ನು ಸಚಿವರು ಸನ್ಮಾನಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾಧಿಕಾರಿ ಆರ್. ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್ ಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್, ತಹಶೀಲ್ದಾರ್ ಶಿವಶಂಕರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT