ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.1ರಿಂದ

ಗೊಂದಲ ಇಲ್ಲದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸತ್ಯಭಾಮಾ ಸೂಚನೆ
Published 21 ಫೆಬ್ರುವರಿ 2024, 15:34 IST
Last Updated 21 ಫೆಬ್ರುವರಿ 2024, 15:34 IST
ಅಕ್ಷರ ಗಾತ್ರ

ಹಾಸನ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.1 ರಿಂದ 22 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದಂತೆ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸುವ್ಯವಸ್ಥೆಯಲ್ಲಿದ್ದು, ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿ ಸತ್ಯಭಾಮಾ, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು  ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಕೇಂದ್ರಗಳು, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.

ಚಲನವಲನಗಳನ್ನು ವೀಕ್ಷಿಸಲು ಪರೀಕ್ಷಾ ಮಂಡಳಿಯ ಕಚೇರಿ, ಜಿಲ್ಲಾ ಖಜಾನಾಧಿಕಾರಿಗಳ ಕೊಠಡಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 24X7 ಗಂಟೆ ಸಿಸಿಟಿವಿ ಕ್ಯಾಮೆರಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾರ್ಥಿಗಳು ಮತ್ತು  ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು  ಹೊರತುಪಡಿಸಿ ಇತರರು ಯಾರೂ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವಂತಿಲ್ಲ. ಇದು ಮಾಧ್ಯಮದವರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಹಾಗೂ ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಗೋಪ್ಯ ಲಕೋಟೆಗಳನ್ನು ಸಾಗಿಸುವ 10 ವಾಹನಗಳಿಗೆ ಶಸ್ತ್ರಸಜ್ಜಿತ ಪೊಲೀಸ್ ಬೆಂಗಾವಲು ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೇಮಿಸಲಿದ್ದಾರೆ. ಈ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ದಿನಗಳಂದು ಗೋಪ್ಯ ಲಕೋಟೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಬಯೋಮೆಟ್ರಿಕ್ ಆಧಾರಿತ ಕರ್ನಾಟಕ ಸೆಕ್ಯೂರ್ ಎಕ್ಸಾಂ ಸಿಸ್ಟಂ ವ್ಯವಸ್ಥೆಯಡಿ ಕಾರ್ಯನಿರ್ವಹಿಸಲಿದೆ ಎಂದರು.

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರನ್ನು ರ‍್ಯಾಂಡ್‌ಮೈಜೇಶನ್ ಮಾಡಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಸ್ಥಾನಿಕ ಜಾಗೃತದಳ, ತಾಲ್ಲೂಕು ಜಾಗೃತ ದಳ ಹಾಗೂ ಉಪ ನಿರ್ದೇಶಕರ ನೇತೃದ್ವಲ್ಲಿ ಒಂದು ಜಿಲ್ಲಾ ಜಾಗೃತದಳ ನೇಮಿಸಲಾಗಿದೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರೆ, ಅಂಥವರಿಗೆ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದಂತೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಯಾವುದೇ ಸಿಬ್ಬಂದಿ ಮೊಬೈಲ್ ಫೋನ್‌ ಬಳಕೆ ನಿಷೇಧಿಸಲಾಗಿದೆ ಎಂದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸ್ಮಾರ್ಟ್ ವಾಚ್,  ಸ್ಮಾರ್ಟ್ ಫೋನ್‌, ಐ ಫೋನ್‌,  ಗ್ಯಾಜೆಟ್, ಕ್ಯಾಲ್ಕುಲೇಟರ್‌ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಹಾಲಿಂಗಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT