ರಕ್ತಬೀಜಾಸುರನ ಸಂಹರಿಸಿದ ಕೆಂಚಾಂಬಿಕೆ
ಹಾಸನಾಂಬ ದೇವಿ ಸೇರಿ ಒಟ್ಟು ಏಳು ಜನ ಸಹೋದರಿಯರಲ್ಲಿ ಹಿರಿಯಳಾದ ಕೆಂಚಾಂಬ (ಬ್ರಾಹ್ಮೀದೇವಿ) ಹರಿಹಳ್ಳಿಯಲ್ಲಿ ನೆಲೆಸಿದ್ದಾಳೆ. ಮಹಿಷಾಸುರನೆಂಬ ರಾಕ್ಷಸನನ್ನು ಚಾಮುಂಡೇಶ್ವರಿ ಸಂಹರಿಸಿದ ನಂತರ ಅವನ ಮಂತ್ರಿಯಾಗಿದ್ದ ರಕ್ತಬೀಜಾಸುರ ಎಂಬ ರಾಕ್ಷಸ ದೇವಿಯಿಂದ ತಪ್ಪಿಸಿಕೊಂಡು ಈ ಭಾಗಕ್ಕೆ ಬರುತ್ತಾನೆ. ಅವನ ಉಪಟಳ ದಿನೇ ದಿನೇ ಹೆಚ್ಚಾಗಿ ಇಲ್ಲಿಯ ಪ್ರಾಣಿ ಪಶು ಪಕ್ಷಿಗಳಾದಿಯಾಗಿ ಮಾನವರಿಗೂ ಬದುಕುವುದೇ ಕಷ್ಟವೆಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದರ್ಭದಲ್ಲಿ ಮಾನವರ ಮೊರೆಗೆ ಓಗೊಟ್ಟು ರಕ್ತಬೀಜಾಸುರನ ಸಂಹಾರಕ್ಕೆಂದು ಹರಿಹಳ್ಳಿಯಲ್ಲಿ ಆದಿಶಕ್ತಿ ಅವತರಿಸುತ್ತಾಳೆ. ಇವಳು ಸರಸ್ವತಿ ಪಾರ್ವತಿ ಹಾಗೂ ಲಕ್ಷ್ಮಿಯರ ಸಂಪೂರ್ಣ ಶಕ್ತಿ ಪಡೆದು ಇಲ್ಲಿಗೆ ಬಂದು ರಾಕ್ಷಸರೊಡನೆ ಯುದ್ಧ ಮಾಡಿ ಅನೇಕರನ್ನು ಸಂಹಾರ ಮಾಡುತ್ತಾಳೆ. ಆದರೆ ರಕ್ತ ಬೀಜಾಸುರನನ್ನು ಕೊಲ್ಲುವುದು ಸುಲಭದ ಮಾತಾಗಿರುವುದಿಲ್ಲ. ಇವನ ಒಂದು ಹನಿ ರಕ್ತ ನೆಲಕ್ಕೆ ಬಿದ್ದರೆ ಅವನಷ್ಟೇ ಶಕ್ತಿಯುಳ್ಳ ಸಹಸ್ರ ರಾಕ್ಷಸರು ಹುಟ್ಟುತ್ತಿದ್ದರು. ಹೀಗಾಗಿ ಆದಿಶಕ್ತಿ ಕೆಂಚಾಂಬಿಕೆಯು ಈತನನ್ನು ಉಪಾಯದಿಂದ ಸಂಹರಿಸುವ ಸಂಕಲ್ಪ ಮಾಡಿ ತನ್ನ ನಾಲಿಗೆಯನ್ನು ನೆಲದ ಮೇಲೆ ಹಾಸಿ ಅದರ ಮೇಲೆ ರಾಕ್ಷಸ ಬರುವಂತೆ ಮಾಡಿ ಕೊಂದಳು. ಹೀಗೆ ರಕ್ತ ಬೀಜಾಸುರನ ಸಂಹಾರ ಮಾಡಿದ ಸ್ಥಳದಲ್ಲೇ ಕೆಂಚಾಂಬಿಕೆ ನೆಲೆಸಿದ್ದಾಳೆ ಎಂದು ಇತಿಹಾಸ ಹೇಳುತ್ತದೆ. ಈ ಕತೆಗೆ ಪೂರಕವಾಗಿ ಇಲ್ಲಿನ ಮಣ್ಣು ಕೆಂಪಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ರಾಮಸ್ವಾಮಿ ಹೇಳುತ್ತಾರೆ.