ಹಾಸನ: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ವತಿಯಿಂದ ಬೆಳ್ತಂಗಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಕೆ.ಆರ್.ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೌರ್ಜನ್ಯ ವಿರುದ್ಧದ ಜನಾಭಿಪ್ರಾಯ ರೂಪಿಸಲು ಪಕ್ಷದಿಂದ ಆ.26 ರಿಂದ ಬೆಳ್ತಂಗಡಿಯಿಂದ ಯಾತ್ರೆ ಆರಂಭಿಸಲಾಗಿದ್ದು, ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿನವರೆಗೆ ನಡೆಸಲಾಗುತ್ತಿದೆ. ಸೆ. 9 ರಂದು ಬೆಂಗಳೂರಿಗೆ ತಲುಪಲಿದ್ದು, ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು
ಬೆಳ್ತಂಗಡಿ ತಾಲ್ಲೂಕಿನಲ್ಲಿ 17 ವರ್ಷದ ಯುವತಿ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಅಗಿಲ್ಲ. ಕುಟುಂಬದವರು ಪೊಲೀಸರ ತನಿಖೆ ಕುರಿತು ಬೇಸರ ಹೊಂದಿದ್ದಾರೆ. ಸುಮಾರು 14 ದಿನಗಳ ಕಾಲ ನಡೆಯಲಿರುವ 330 ಕಿ.ಮೀ. ಪಾದಯಾತ್ರೆಯಲ್ಲಿ ಕೆ.ಆರ್.ಎಸ್. ಪಕ್ಷವು ರಾಜ್ಯದ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸುತ್ತಿದೆ ಎಂದರು.
ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಮರು ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ, ಈಗಾಗಲೇ ತನಿಖೆ ಮಾಡಿರುವ ತನಿಖಾಧಿಕಾರಿಗಳನ್ನೂ ತನಿಖೆಗೆ ಒಳಪಡಿಸಬೇಕು. ತನಿಖೆಗೆ ಒಳಪಡಿಸಬೇಕು. ರಾಜ್ಯದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಶೀಘ್ರ ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನದಲ್ಲಿ ಕಾನೂನು ವ್ಯಾಪ್ತಿಯೊಳಗೆ ಆರೋಪಿಗಳಿಗೆ ಶಿಕ್ಷೆ ನೀಡುವ ಮೂಲಕ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುವಂತಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು. ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.