ಗುರುವಾರ , ಸೆಪ್ಟೆಂಬರ್ 23, 2021
23 °C
ಎಐಡಿಎಸ್‌ಒ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳ ಧರಣಿ

ಹಾಸನ: ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಲಿ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ವಿದ್ಯಾರ್ಥಿಗಳ ನಡುವಿನ ತಾರತಮ್ಯ ನಿಲ್ಲಿಸಿ, ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಿ ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಎಲ್‌.ವಿ.ಪಾಲಿಟೆಕ್ನಿಕ್‌ ಸರ್ಕಾರಿ ಕಾಲೇಜು ಆವರಣದಿಂದ ಬಿ.ಎಂ.ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿದರು. ಕೆಲ ಕಾಲ ಧರಣಿ ನಡೆಸಿದರು ಸರ್ಕಾರ ಹಾಗೂ ಶಿಕ್ಷಣ ನೀತಿ ವಿರುದ್ಧ ಘೋಷಣೆ ಕೂಗಿದರು.

ಎಐಡಿಎಸ್‌ಒ ಸಂಚಾಲಕ ಸುಮಂತ್‌ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಾದ್ಯಂತ ಕಳೆದ ಒಂದು ತಿಂಗಳಿಂದ ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹೋರಾಟ ನಡೆಸಿರುವುದನ್ನು ಗಮನದಲ್ಲಿರಿಸಿಕೊಂಡು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿರುವುದು ಸ್ವಾಗತಾರ್ಹ’ ಎಂದರು.

‘ಇದರಿಂದ ರಾಜ್ಯದ ವಿದ್ಯಾರ್ಥಿಗಳು ನಿರಾಳರಾಗಿದ್ದು, ಬಹಳ ಸಂತೋಷ ಉಂಟುಮಾಡಿದೆ. ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಇಂತಹ ಅಸಾಮಾನ್ಯ ಪರಿಸ್ಥಿತಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಮೂರು ಪರೀಕ್ಷೆಗಳನ್ನು ಅಕ್ಟೋಬರ್ ತಿಂಗಳೊಳಗೆ ಎದುರಿಸುವ ಸಮಸ್ಯೆಯಿಂದಾಗಿ, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ’ ಎಂದು ಹೇಳಿದರು.

‘ಈ ಹಿನ್ನೆಲೆಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಸೂಕ್ತ ಪರಿಹಾರ ಕೈಗೊಳ್ಳಬೇಕು. ಯಾವುದಾದರೂ ಒಂದು ಸೆಮಿಸ್ಟರ್ ಪರೀಕ್ಷೆಯನ್ನು ರದ್ದುಗೊಳಿಸಬೇಕು. ಹೀಗಾದಲ್ಲಿ ರಾಜ್ಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗುತ್ತದೆ’ ಎಂದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಪ್ರೀತಂ, ವರುಣ್, ಜಿಲ್ಲಾ ಹೋರಾಟ ಸಮಿತಿ ಸದಸ್ಯರಾದ ಅನುಷಾ, ಸುಷ್ಮಾ, ಶರತ್, ಕಿರಣ್, ಯುವರಾಜ್, ಮನೋಜ್, ಹರ್ಷ, ಅಜಿತ್ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.