ಮರಳು ಅಕ್ರಮ ಸಾಗಾಟಕ್ಕೆ ಕಡಿವಾಣ

7
ಸಾರ್ವಜನಿಕರಿಗೆ ಸುಲಭವಾಗಿ ದೊರೆಯಲು ವ್ಯವಸ್ಥೆ: ಕಟಾರಿಯ

ಮರಳು ಅಕ್ರಮ ಸಾಗಾಟಕ್ಕೆ ಕಡಿವಾಣ

Published:
Updated:

ಹಾಸನ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಲಭವಾಗಿ ಮರಳು ದೊರೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ರಾಜಕುಮಾರ್ ಕಟಾರಿಯ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮರಳು ಹಾಗೂ ನೈಸರ್ಗಿಕ ಖನಿಜ ಸಂಪನ್ಮೂಲಗಳ ಅಕ್ರಮ ಸಾಗಾಟದ ಮೇಲೆ ವಿಶೇಷ ನಿಗಾವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಮರಳು ಲಭ್ಯವಿದೆಯಾದರೂ ಸರ್ಕಾರಿ ಕಾಮಗಾರಿ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಸಿಗುತ್ತಿಲ್ಲ. ಅದಕ್ಕಾಗಿ ವ್ಯವಸ್ಥಿತ ಮರಳು ವಿಲೇವಾರಿ ಯೋಜನೆ ರೂಪಿಸಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಹರಾಜಾಗದೇ ಉಳಿದಿರುವ ಮರಳು ನಿಕ್ಷೇಪಗಳನ್ನು ಈ ಉದ್ದೇಶಕ್ಕೆ ಬಳಸಬಹುದಾಗಿದೆ. ಒಂದು ದರ ನಿಗದಿ ಪಡಿಸಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರಿಂದ ಅನುಮತಿ ಪಡೆದ ಜಿ.ಪಿ.ಎಸ್ ವಾಹನಗಳು ಸಾಗಾಟ ಮಾಡಲು ಕ್ರಮವಹಿಸಬಹುದು ಎಂದು ಕಟಾರಿಯ ಹೇಳಿದರು.

ಜಿಲ್ಲೆಯಲ್ಲಿ 40 ಬ್ಲಾಕ್ ಗಳಿದ್ದು, 23 ನಿಕ್ಷೇಪಗಳು ಮಾತ್ರ ಹರಾಜಾಗಿವೆ. ಉಳಿದವುಗಳನ್ನು ಈ ಉದ್ದೇಶಕ್ಕೆ ಬಳಸಬಹುದು. ಗ್ರಾಮ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಅಥವಾ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಇವುಗಳನ್ನು ನಿಯಂತ್ರಿಸಬಹುದು ಎಂದರು.

ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಮರಳು, ಜಲ್ಲಿ ಮತ್ತಿತರ ಖನಿಜಗಳಿಗೆ ನಿರ್ದಿಷ್ಟ ಪ್ರಮಾಣದಲ್ಲಿ ರಾಜಧನ ಕಟ್ಟಬೇಕಿದ್ದು, ಪ್ರತಿ ರಸೀದಿ ಮೇಲೆ ಆ ಹಣ ಕಟ್ಟಿಸಿಕೊಳ್ಳುವಂತೆ ಲೋಕೋಪಯೋಗಿ ಹಾಗೂ ಎತ್ತಿನ ಹೊಳೆ ಯೋಜನೆಗಳ ಕಾರ್ಯಪಾಲಕ ಎಂಜಿನಿಯರ್ ಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಮರಳು ಅಕ್ರಮ ಸಾಗಾಟದ ಮೇಲೆ ಸಾಕಷ್ಟು ನಿಗಾ ವಹಿಸಲಾಗಿದೆ. ಸಾರ್ವಜನಿಕರಿಗೆ ಮರಳು ವಿತರಣೆಗೆ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಉಪವಿಭಾಗಾಧಿಕಾರಿ ಮೂಲಕ ಆಯಾಯ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಮರಳು ಬ್ಲಾಕ್ ಗಳನ್ನು ಗುರುತಿಸಿ ಸಾರ್ವಜನಿಕರು ಹಾಗೂ ಸರ್ಕಾರಿ ಕಾಮಗಾರಿಗಳಿಗೆ ವಿತರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಪ್ರಿಯಾಂಕ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಮಂಜು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅರ್ಚನಾ, ಎತ್ತಿನ ಹೊಳೆ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !