ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಅನುದಾನ ದುರುಪಯೋಗ

ಪಿಡಿಒಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೂಚನೆ
Last Updated 19 ಜನವರಿ 2020, 10:38 IST
ಅಕ್ಷರ ಗಾತ್ರ

ಅರಸೀಕೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗಾಗಿ ಸರ್ಕಾರ ಮೀಸಲಿಟ್ಟಿರುವ ಹಣವನ್ನು ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ಮೂಲ ಸೌಲಭ್ಯ ಒದಗಿಸಲು ಸರ್ಕಾರವು ಶೇ 23ರಷ್ಟು ಹಣವನ್ನು ಮೀಸಲಿಟ್ಟಿದೆ. ಆದರೆ, ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಿಟ್ಟಿರುವ ಹಣವನ್ನು ದುರುಪಯೋಗ ಪಡಿಸಿಕೊಂಡು ನಿಜವಾದ ಫಲಾನುಭವಿಗಳಿಗೆ ವಂಚನೆ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ತಾಲ್ಲೂಕು ಪಂಚಾಯಿತಿ ಇಒ ಇದರ ಬಗ್ಗೆ ಗಮನ ಹರಿಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಆ ಪಿಡಿಒಗಳ ವಿರುದ್ಧ ದೂರು ದಾಖಲಿಸಲು ಹಿಂಜರಿಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಮಾದಿಗ ದಂಡೋರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎ.ಪಿ.ಚಂದ್ರಯ್ಯ ಮಾತನಾಡಿ, ‘ಎಸ್‌ಸಿ ಮತ್ತು ಎಸ್‌ಟಿ ಅನುದಾನ ದುರುಪಯೋಗ ಆಗುತ್ತಿರುವುದರ ಬಗ್ಗೆ ಎಸ್‌ಸಿ ಮತ್ತು ಎಸ್‌ಟಿ ಆಯೋಗದಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಮುಂದೆ ಈ ರೀತಿ ತಪ್ಪುಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತಾ.ಪಂ ಇಒ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಇಒ ನಟರಾಜ್ ಮಾತನಾಡಿ, ‘ಸರ್ಕಾರದಿಂದ ಮಂಜೂರಾದ ಹಣದಲ್ಲಿ ಈಗಾಗಲೇ ಶೇ 50ರಷ್ಟು ಅನುದಾನವನ್ನು ಖರ್ಚು ಮಾಡಲಾಗಿದೆ. ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಗಮನಕ್ಕೆ ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಜಾಜೂರು ಗ್ರಾ.ಪಂ.ನಲ್ಲಿ ಎಸ್‌ಸಿ, ಎಸ್‌ಟಿಗೆ ಮೀಸಲಾದ ಅನುದಾನದ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಸರ್ಕಾರಿ ಕಚೇರಿಗಳಲ್ಲೇ ದಲಿತರನ್ನು ತುಳಿಯುವ ಹುನ್ನಾರ ನಡೆಸಲಾಗುತ್ತಿದೆ ಎಂದು ಕಲ್ಲನಾಯಕನಹಳ್ಳಿ ರಘು ದೂರಿದರು.

ನಗರದ ಮೈಸೂರು ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಛಲವಾದಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಅಡ್ಡಿಪಡಿಸಲಾಗುತ್ತಿದೆ. ಅದರ ಪಕ್ಕದಲ್ಲೇ ಖಾಸಗಿ ವ್ಯಕ್ತಿಯೊಬ್ಬರು ಶಾಲೆಯನ್ನು ನಿರ್ಮಿಸಿದ್ದಾರೆ. ಆ ಕಟ್ಟಡದ ಮೇಲೆ ಹೈಟೆನ್ಷನ್‌ ತಂತಿ ಹಾದು ಹೋಗಿದ್ದು, ಮಕ್ಕಳಿಗೆ ತೊಂದರೆ ಆಗಲಿದೆ. ಹೀಗಾಗಿ, ಶಾಲೆಯ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದರು.

ತಹಶೀಲ್ದಾರ್ ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೂಪಾ ಗುರುಮೂರ್ತಿ, ಉಪಾಧ್ಯಕ್ಷೆ ಪ್ರೇಮಾ ಧರ್ಮೇಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಟೇಲ್ ಶಿವಪ್ಪ, ಮಾಡಾಳು ಸ್ವಾಮಿ, ನಗರಸಭೆ ಪೌರಾಯುಕ್ತ ಕಾಂತರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಾಲಪ್ಪ, ಸಿಪಿಐ ಚಂದ್ರಶೇಖರಯ್ಯ, ತಾಲ್ಲೂಕು ಮಾದಿಗ ದಂಡೋರ ಸಮಿತಿ ಗೌರವಾಧ್ಯಕ್ಷ ಎನ್.ಎಂ. ಶೇಖರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT