ಗುರುವಾರ , ಮೇ 19, 2022
20 °C
ಜಿ.ಪಂ ಕಚೇರಿ ಎದುರು ಅಕ್ಷರ ದಾಸೋಹ ನೌಕರರ ಪ್ರತಿಭಟನೆ

₹ 1 ಲಕ್ಷ ಇಡಗಂಟು ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

2001-02 ರಲ್ಲಿ ಅಡುಗೆ ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳುವಾಗ ವಿದ್ಯಾಭ್ಯಾಸ ಮತ್ತು ವಯಸ್ಸಿನ ಅರ್ಹತೆ ಮಾತ್ರ ನಿಗದಿ ಮಾಡಲಾಗಿತ್ತು. ಅದರಲ್ಲಿ ನಿವೃತ್ತಿ ವಯಸ್ಸು ನಿಗದಿಪಡಿಸಿಲ್ಲ. 2016 ರಿಂದಲೂ ವಯಸ್ಸಿನ ಆಧಾರದಲ್ಲಿ ನಿವೃತ್ತಿ ಸೌಲಭ್ಯ ಕೊಡಬೇಕೆಂದು ಹಲವು ಬಾರಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡರೂ ಮುತುವರ್ಜಿ ವಹಿಸಲಿಲ್ಲ ಎಂದು ದೂರಿದರು. 

60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ₹ 1 ಲಕ್ಷ ಇಡಗಂಟು ನೀಡಿ ಬಿಡುಗಡೆ ಮಾಡಬೇಕು. ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ ₹ 1,000 ವೇತನವನ್ನು ಜನವರಿ 2022 ರ ಜನವರಿಯಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಖಾಸಗೀಕರಣ ಮಾಡಬಾರದು ಮತ್ತು ನೌಕರರನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ಖಜಾಂಚಿ ಕಲಾವತಿ ಮಾತನಾಡಿ, ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು  ಎಂದರು.

ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ನೀಡಿ ವೇತನ ನೀಡಬೇಕು. ನೌಕರರಿಗೆ ಪ್ರತಿ ತಿಂಗಳು 5 ನೇ ತಾರೀಖಿನ ಒಳಗೆ ವೇತನ ಪಾವತಿಯಾಗಬೇಕು. ನೇರವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿಯ ಮೇಲ್ವಿಚಾರಣೆ ನಡೆಸಬೇಕು. ಪ್ರತಿಶಾಲೆಯಲ್ಲಿ ಕನಿಷ್ಠ 2 ಜನ ಅಡುಗೆಯವರು ಇರಲೇಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಎಂ.ಬಿ. ಪುಷ್ಪಾ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಅರವಿಂದ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.