ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ, ಹಲವರ ವಶಕ್ಕೆ ಪಡೆದು ಬಿಡುಗಡೆ
Last Updated 28 ಸೆಪ್ಟೆಂಬರ್ 2020, 14:05 IST
ಅಕ್ಷರ ಗಾತ್ರ

ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆ ಗಳು ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲಾದ್ಯಾದಂತ ಬಸ್‌, ಆಟೊ ಹಾಗೂ ಇತರ ವಾಹನಗಳು ಸಂಚರಿಸಿದವು. ಜನಜೀವನ ಸಹಜ ಸ್ಥಿತಿಯಲ್ಲಿತ್ತು.
ಕೆಲವರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮಧ್ಯಾಹ್ನದವರೆಗೂ ಬಂದ್‌ ಮಾಡಿದ್ದರು. ಕಟ್ಟಿನಕೆರೆ
ಮಾರುಕಟ್ಟೆ ಬಂದ್‌ ಆಗಿತ್ತು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ನಗರದ ಹೇಮಾವತಿ ವೃತ್ತದಲ್ಲಿ ಸಮಾವೇಶಗೊಂಡ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು,
ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಎನ್‌.ಆರ್‌.ವೃತ್ತದವರೆಗೂ ಮೆರವಣಿಗೆಯಲ್ಲಿ ಸಾಗಿ ಮಾನವ
ಸರಪಳಿ ರಚಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ರ್‍ಯಾಲಿ ನಡೆಸಿ,
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ನಡೆಸಿದರು. ಹೇಮಾವತಿ ವೃತ್ತದ ಬಳಿ
ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಎ. ಗೋಪಾಲಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಕೊಟ್ಟೂರು, ಶ್ರೀನಿವಾಸ್‌,
ಹಸಿರು ಸೇನೆ ಮುಖಂಡ ಬಾಬು, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಎಚ್‌.ಆರ್‌. ನವೀನ್‌
ಕುಮಾರ್‌, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ಡಿವೈಎಫ್‌ಐ ನ
ಮಧುಸೂದನ್‌ ಅವರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಲಾಯಿತು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌ ಮಾತನಾಡಿ, ಕೋವಿಡ್‌ನಿಂದ ದೇಶ ಸಂಕಷ್ಟದ ಸ್ಥಿತಿಯಲ್ಲಿದೆ. ದೇಶದಲ್ಲಿಲಾಕ್‌ಡೌನ್‌ ಇರುವುದು ಕೇವಲ ಜನಸಾಮಾನ್ಯರಿಗೆ ಮಾತ್ರ, ರಾಜಕಾರಣಿಗಳಿಗೆ, ಸರ್ಕಾರಕ್ಕೆ ಯಾವುದೇ ನಿಬಂಧನೆಗಳಿಲ್ಲಎಂದು ಆರೋಪಿಸಿದರು.

ತೃತಿಯ ಲಿಂಗಿಗಳ ಪ್ರತಿನಿಧಿಯಾಗಿ ಮಂಗಳಮುಖಿ ವರ್ಷ ಮಾತನಾಡಿ, ರೈತ ವಿರೋಧಿ, ಕಾರ್ಮಿಕ ವಿರೋಧಿ
ಕಾಯ್ದೆಗಳನ್ನು ಜಾರಿಗೆ ತರಬಾರದು ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್‌ ಮಂಜುನಾಥ್‌, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ
ಎಚ್‌.ಪಿ. ಸ್ವರೂಪ್‌, ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಚ್‌.ಕೆ. ಸಂದೇಶ್, ಅಂಬುಗ ಮಲ್ಲೇಶ್‌,
ಕೃಷ್ಣದಾಸ್‌, ದಲಿತ ಹಕ್ಕುಗಳ ಸಮಿತಿಯ ಸಂಚಾಲಕ ಎಂ.ಜಿ. ಪೃಥ್ವಿ, ಕರ್ನಾಟಕ ಪ್ರಾಂತ ರೈತ ಸಂಘದ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ್‌ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಸತೀಶ್‌ ಪಟೇಲ್‌, ಎಎಪಿ ಪಕ್ಷದ ಸಂಚಾಲಕ
ಶಿವಕುಮಾರ್‌, ಟಿಪ್ಪು ಸಂಘರ್ಷ ಸಮಿತಿ ಸಂಚಾಲಕ ಮುಬಶಿರ್‌ ಅಹಮದ್‌, ಕರ್ನಾಟಕ ಲೈಂಗಿಕ ಕಾರ್ಮಿಕರ
ಯೂನಿಯನ್‌ ನ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT