ಹಾಸನ: ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಸದಸ್ಯರು, ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದ ಪ್ರತಿಭಟನಕಾರರು, ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿದರು. ಗೋ ಬ್ಯಾಕ್ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧೇಶ್ ನಾಗೇಂದ್ರ, ರಾಜ್ಯಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, ಮೂರು ತಿಂಗಳಿನಿಂದ ಬಿಜೆಪಿ ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸುತ್ತಿದೆ. ಪಾದಯಾತ್ರೆ ಸೇರಿದಂತೆ ಪ್ರತಿ ಜಿಲ್ಲೆಯಲ್ಲಿಯೂ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ನಮ್ಮ ಪಕ್ಷದ ಹೋರಾಟಕ್ಕೆ ಇಂದು ಮೊದಲ ಹಂತದ ಜಯ ಸಿಕ್ಕಿದಂತಾಗಿದೆ ಎಂದರು.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮುಖ್ಯಮಂತ್ರಿಯಂತಹ ಉನ್ನತ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಹೈಕೋರ್ಟ್ ತನಿಖೆಗೆ ಆದೇಶ ನೀಡಿದ್ದರೂ, ಇದುವರೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡದಿರುವುದು ಖಂಡನೀಯ. ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಬಿಜೆಪಿಯಿಂದ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಪ್ರಸನ್ನ ಕುಮಾರ್, ನಾರಾಯಣಗೌಡ, ವೇದಾವತಿ, ಪ್ರೀತಿವರ್ಧನ್, ಶೋಭನ್ ಬಾಬು ಇತರರು ಭಾಗವಹಿಸಿದ್ದರು.