ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಮೂಲಸೌಕರ್ಯ ಕಲ್ಪಿಸಲು ಒತ್ತಾಯ
Last Updated 15 ಜುಲೈ 2020, 13:31 IST
ಅಕ್ಷರ ಗಾತ್ರ

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ಅನನ್ಯವಾಗಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮೂಲಸೌಕರ್ಯ ಕಲ್ಪಿಸಬೇಕು. ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ಗುಣಮಟ್ಟದ ಮಾಸ್ಕ್‌, ಸ್ಯಾನಿಟೈಸರ್‌, ಇತರ ಸಾಮಗ್ರಿ ಹಾಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ಸಿಬ್ಬಂದಿ ಜತೆಗೆ ಕೆಲಸ ಮಾಡುತ್ತಿರುವ ವೇಳೆ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

45 ವರ್ಷದಿಂದ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರನ್ನು ಕಾಯಂ ಮಾಡಬೇಕು. ಕಾಯಂ ಮಾಡುವವರೆಗೂ ಕನಿಷ್ಠ ಕೂಲಿ ಕೊಡಬೇಕು ಹಾಗೂ ನೌಕರರಂತೆ ಪರಿಗಣಿಸಬೇಕು. ಮಿನಿ ಅಂಗಡಿ ನೌಕರರಿಗೆ ಮುಂಬಡ್ತಿ ನೀಡಬೇಕು. ನೇರ ಸಂದರ್ಶನ ಮೂಲಕ ಮೇಲ್ವಿಚಾರಕರ ಹುದ್ದೆಯನ್ನು ಅಂಗನವಾಡಿ ಕಾರ್ಯಕತೆಯರಿಗೆ ನೀಡಬೇಕು ಎಂದರು.

ಸ್ಥಳೀಯವಾಗಿ ಸಾಕಷ್ಟು ಸಮಸ್ಯೆಗಳು ಇದ್ದು, ಅವುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಮೊಟ್ಟೆ ಹಣ ಮೂರು ತಿಂಗಳು ಮೊದಲೇ ನೀಡುವಂತೆ ಮನವಿ ಮಾಡಿದರು ಸ್ಪಂದಿಸಿಲ್ಲ. ಪ್ರತಿ ತಿಂಗಳು 5ರೊಳಗೆ ಗೌರವ ಧನ ನೀಡಬೇಕು. ಆಹಾರ ಪದಾರ್ಥ ತಡವಾಗಿ ಬರುತ್ತಿರುವುದರಿಂದ ಗ್ರಾಮಗಳಲ್ಲಿ ಜನರಿಂದ ಸಮಸ್ಯೆ ಎದುರಿಸಬೇಕಾಗಿದೆ. ಇಲ್ಲವಾದರೆ ಆಗಸ್ಟ್‌ನಿಂದ ಅಸಹಕಾರ ಚಳುವಳಿ ನಡೆಸಲಾಗುವುದು ಎಂದು ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಜಯಂತಿ ಎಚ್ಚರಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಧರ್ಮೇಶ್‌, ಮುಖಂಡರಾದ ಎಂ.ಬಿ.ಪುಷ್ಪಾ, ಅರವಿಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT