ಶನಿವಾರ, ಅಕ್ಟೋಬರ್ 16, 2021
23 °C

ರೈತರ ಹತ್ಯೆ: ನ್ಯಾಯಾಂಗ ತನಿಖೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ಪಡೆಯ ವಾಹನ ಹತ್ತಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ನಗರದ ಹೇಮಾವತಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಕಾರರು ಘಟನೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅಜಯ ಮಿಶ್ರಾ ಅವರ ಮಗ ಇರುವ ಹಾಗೂ ಅವರ ಬೆಂಗಾವಲು ವಾಹನವನ್ನು ಪ್ರತಿಭಟನೆ ನಿರತ ರೈತರ ಮೇಲೆ ಹತ್ತಿಸಿ ಕೊಲೆ ಮಾಡಲಾಗಿದೆ. ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದಲ್ಲಿ ಹಲವು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ, ಕೃಷಿ ವಿರೋಧಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟವನ್ನು ಮಾತುಕತೆಯ ಮೂಲಕ ಎದುರಿಸಲು ಆಗದೆ ಈ ರೀತಿಯ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆಯಬೇಕು. ಹತ್ಯೆಯಾದ ರೈತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು. ಇಲ್ಲದಿದ್ದರೆ ದೇಶದಾದ್ಯಂತ ರೈತ ಸಂಘಟನೆಗಳು ಉಗ್ರವಾಗಿ ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಮೇಲೆ ಬಲಪ್ರಯೋಗ ಮಾಡುತ್ತಿದ್ದು, ರೈತರ ಹತ್ಯೆ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವುದರಲ್ಲಿ ವಿಫಲವಾಗಿದೆ.  ಕೇಂದ್ರ ಸರ್ಕಾರ ರೈತರ ಪರ ನಿಲುವು ತೋರದೆ ಬಂಡವಾಳಶಾಹಿಗಳ ಪರವಾಗಿ ಕಾನೂನು ರೂಪಿಸಿ ಕಾರ್ಪೋರೇಟ್‌ ಗುಲಾಮಗಿರಿ ಮಾಡುತ್ತಿದೆ ಎಂದು ದೂರಿದರು.

ಈ ಸಂಬಂಧ ಜಿಲ್ಲಾಧಿಕಾರಿ ಆರ್‌.ಗಿರೀಶ್ ಅವರು ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ
ಮನವಿ ಅರ್ಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.