ಭಾನುವಾರ, ಜನವರಿ 19, 2020
28 °C
Nandihalli Clash

ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಧರಣಿ: ರೇವಣ್ಣ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ : ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿಯಲ್ಲಿ ನಡೆದ ಘರ್ಷಣೆ ಪ್ರಕರಣದ ಸಂಬಂಧ ಎರಡು ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯ ಜೆಡಿಎಸ್‌ ಶಾಸಕರು ಮತ್ತು ಸಂಸದರೊಂದಿಗೆ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಶಾಸಕ ಎಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದರು.

ನಂಬಿಹಳ್ಳಿ ಪ್ರಕರಣದಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ, ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ವಿರುದ್ಧ ನೀಡಿರುವ ದೂರಿನ ಸಂಬಂಧ ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ ಸೆಪಟ್‌ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಫಲಿತಾಂಶ ಹೊರಬೀಳುವ ಮೊದಲೇ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಎಸ್‌ಪಿ ಕಾಲಾವಕಾಶ ಕೇಳಿದ್ದರಿಂದ ಸುಮ್ಮನಾಗಬೇಕಾಯಿತು. ಇದುವರೆಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಎಸ್ಪಿ ಜೆಡಿಎಸ್ ದೂರನ್ನು ಕಡೆಗಣಿಸಿರಬಹುದು. ‍‍‍ಆದರೆ, ನಾವು ಸುಮ್ಮನೆ ಇರುವುದಿಲ್ಲ. ಪೊಲೀಸ್‌ ಮಹಾ ನಿರ್ದೇಶಕರೇ ಸ್ಥಳಕ್ಕೆ ಬಂದು ಕ್ರಮ ಕೈಗೊಳ್ಳುವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದರು ಸ್ಪಷ್ಟಪಡಿಸಿದರು.

‘ಪ್ರಕರಣದ ತನಿಖೆ ನಡೆಸುತ್ತಿದ್ದ ಚನ್ನರಾಯಪಟ್ಟಣದ ಪೊಲೀಸ್‌ ಇನ್‌ಸ್ಪೆಕ್ಟರ್‌ ಅನ್ನು ದಿಢೀರ್‌ ವರ್ಗಾವಣೆ ಮಾಡಿ ಅಮಾನತುಗೊಂಡು ಹುದ್ದೆಯಿಲ್ಲದೆ ಕಾಯುತ್ತಿದ್ದ ಇನ್‌ಸ್ಪೆಕ್ಟರ್‌ ಅನ್ನು ಚನ್ನರಾಯಪಟ್ಟಣಕ್ಕೆ ವರ್ಗ ಮಾಡಲಾಗಿದೆ. ಆರೋಪಿಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಪ್ರಾಮಾಣಿಕ ಅಧಿಕಾರಿಯನ್ನು ವರ್ಗ ಮಾಡಲಾಗಿದೆ. ಬಿಜೆಪಿ ಏಜೆಂಟ್‌ರಂತೆ ವರ್ತಿಸಿ, ಪಕ್ಷಪಾತ ಮಾಡುತ್ತಿರುವ ಎಸ್ಪಿ ಜತೆ ಮಾತನಾಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು