ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಅಧಿಸೂಚನೆ ರದ್ದುಪಡಿಸಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ

Last Updated 28 ಜುಲೈ 2020, 13:37 IST
ಅಕ್ಷರ ಗಾತ್ರ

ಹಾಸನ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಹಾಗೂ ಅತಿಥಿ
ಉಪನ್ಯಾಸಕರನ್ನು ಕಾಯಂ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಹಾಗೂ ಜಯ ಕರ್ನಾಟಕ ಸಂಘಟನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14564 ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ನಾಲ್ಕು ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಸಾಧ್ಯವಾಗದೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಆದರೆ, ಸರ್ಕಾರ ಗಾಯದ ಮೇಲೆ ಬರೆ ಎಳೆದಂತೆ ಜುಲೈ 7 ರಂದು ಸಹಾಯಕ ಪ್ರಾಧ್ಯಪಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಇದರಿಂದ 2400 ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಅಳಲು ತೋಡಿಕೊಂಡರು.

ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಹರಿಯಾಣ, ಪಶ್ಚಿಮ ಬಂಗಾಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಒದಗಿಸಿ, ಸೇವಾ ವಿಲೀನಗೊಳಿಸಬೇಕು. ಲಾಕ್‌ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಕೂಡಲೇ ವೇತನ ಬಿಡುಗಡೆ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡು ಅತಿಥಿ ಉಪನ್ಯಾಸಕರ ನೊಂದ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರ ಧನ ನೀಡಬೇಕು ಎಂದು ಆಗ್ರಹಿಸಿದರು.

ನೇಮಕಾತಿ ಅಧಿಸೂಚನೆ ಸಂಬಂಧಪಟ್ಟಂತೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಿದ್ದರೂ ಇಲಾಖೆ ಪರಿಗಣಿಸಿಲ್ಲ. ಹೊಸ ನೇಮಕಾತಿ ಬದಲಿಗೆ ಅತಿಥಿ ಉಪನ್ಯಾಸಕರನ್ನೇ ಕಾಯಂ ಮಾಡಿಕೊಂಡರೆ ಅನುಕೂಲವಾಗುತ್ತದೆ. ಜತೆಗೆ ಜೀವನೋಪಾಯಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.

ಸಮನ್ವಯ ಸಮಿತಿ ಜಿಲ್ಲಾ ಗೌರವಾಧ್ಯಕ್ಷ ಸಿ. ಶಿವಪ್ಪ, ಅಧ್ಯಕ್ಷ ಯತೀಶ್ ಕಬ್ಬಾಳು, ಎಂ.ಎಸ್. ಆನಂದ್‍ಕುಮಾರ್, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಣಿ, ಕಾರ್ಯಾಧ್ಯಕ್ಷ ಸಂಗಮ್ , ಚೌಡಹಳ್ಳಿ ಜಗದೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT