ಭಾನುವಾರ, ಸೆಪ್ಟೆಂಬರ್ 27, 2020
27 °C
ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ

ಪ್ರತಿ ತಾಲ್ಲೂಕಿಗೆ ₹ 2 ಕೋಟಿ ಅನುದಾನ ನೀಡಿ: ಎಚ್‌.ಡಿ.ರೇವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದ್ದು, ಸರ್ಕಾರ ತುರ್ತಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಪ್ರತಿ ತಾಲ್ಲೂಕಿಗೆ ₹ 2 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದರು.

ಸಕಲೇಶಪುರ, ಆಲೂರು, ಅರಕಲಗೋಡು, ಬೇಲೂರು ಮತ್ತು ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಳೆಯಿಂದ ಸಾಕಷ್ಟು ಮನೆಗಳಿಗೆ ಹಾನಿ ಉಂಟಾಗಿದೆ. ರಸ್ತೆ, ಸೇತುವೆ ಕೊಚ್ಚಿ ಹೋಗಿವೆ. ವಿದ್ಯುತ್‌ ಕಂಬಗಳು ಬಿದ್ದಿವೆ. ಜೊತೆಗೆ ಸಾಕಷ್ಟು ಬೆಳೆ ಹಾನಿ ಉಂಟಾಗಿದ್ದು, ನಷ್ಟಕ್ಕೆ ಒಳಗಾದವರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಹೇಮಾವತಿಗೆ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ್ದು, ಎರಡು, ಮೂರು ದಿನದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ. ಮೂರು ತಿಂಗಳಿನಿಂದ ನಿರಾವರಿ ಸಲಹಾ ಸಮಿತಿ ಸಭೆ ಕರೆಯಲು ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಆ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಸಭೆ ಯಾವಾಗ ಬೇಕಾದರೂ ನಡೆಸಲಿ. ಅದಕ್ಕೂ ಮುನ್ನವೇ ನಾಲೆಗಳಿಗೆ ನೀರು ಹರಿಸಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ನೀರಾವರಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದರು.

‘ಕೋವಿಡ್‌ ಲಾಕ್‌ಡೌನ್‌ ವೇಳೆ ಕಾರ್ಮಿಕ ಇಲಾಖೆಯಿಂದ ನೀಡುವ ಕಿಟ್‌ಗಳನ್ನು ಜಿಲ್ಲೆಗೆ ನೀಡಿಲ್ಲ. ಬಿಜೆಪಿ ಶಾಸಕ ಕ್ಷೇತ್ರಗಳಿಗೆ ಮಾತ್ರ ನೀಡಲಾಗಿದೆ. ದ್ವೇಷದ ರಾಜಕಾರಣ ಮುಂದುವರೆಸಿದರೆ ಶಾಸಕರು, ಜನರೊಂದಿಗೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ನೀರಾವರಿ ಇಲಾಖೆಯಲ್ಲಿ ಕಾಮಗಾರಿಗೆ ಬಿಲ್‌ ಪಾಸ್‌ ಮಾಡಲು ಶೇಕಡಾ 6.5 ರಷ್ಟು ಕಮಿಷನ್‌ ನೀಡಬೇಕಿದೆ. ಸಮ್ಮಿಶ್ರ ಸರ್ಕಾರವನ್ನು ಪರ್ಸಂಟೇಜ್‌ ಸರ್ಕಾರ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾಹಿತಿ ತರಿಸಿಕೊಳ್ಳಲಿ. ಇದು ಲೂಟಿಕೋರರ ಸರ್ಕಾರ. ನೀರಾವರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಚಾರ ಕುರಿತು ಸದ್ಯದಲ್ಲೇ ದಾಖಲೆ ಸಮೇತ ಬಿಡುಗಡೆ ಮಾಡಲಾಗುವುದು’ ಎಂದು ಹೇಳಿದರು.

ಕೋವಿಡ್‌ಗೆ ಸಂಬಂಧಿಸಿದ ಔಷಧ, ಇಂಜೆಕ್ಷನ್‌ ಹಾಗೂ ಪಿಪಿಇ ಕಿಟ್‌ಗಳ ಕೊರತೆ ಇದ್ದು, ರೋಗಿಗಳು
ಪರದಾಡುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಈ ಬಗ್ಗೆ ಗಮನ ಹರಿಸಬೇಕು. ಸರಿಯಾಗಿ ಚಿಕಿತ್ಸೆ ಸಿಗದೆ ಮೃತಪಡುತ್ತಿರುವವರ ಸಂಖ್ಯೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.