ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಹಳ್ಳಿ ಫೈಟ್‌ಗೆ ಬಿರುಸಿನ ತಯಾರಿ

ಎರಡು ಹಂತಗಳಲ್ಲಿ ಚುನಾವಣೆ, ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಸೂಚನೆ
Last Updated 1 ಡಿಸೆಂಬರ್ 2020, 19:30 IST
ಅಕ್ಷರ ಗಾತ್ರ

ಹಾಸನ: ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಘೋಷಣೆ ಆಗುತ್ತಿದ್ದಂತೆ ಹಳ್ಳಿ ಫೈಟ್‌ ಅಖಾಡದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ.

ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಸಿದ್ಧತೆ ನಡೆಸಿವೆ. ಪ್ರತಿ ತಾಲ್ಲೂಕು ಹೋಬಳಿ ಕೇಂದ್ರಗಳ್ಲಲಿ ಸಭೆ ಮಾಡಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿವೆ. ರಾಜಕೀಯ ಪಕ್ಷಗಳು ತಮ್ಮ ಬೆಂಬಲಿಗ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿದ್ದು, ಕಾರ್ಯಕರ್ತರು ಮತ್ತಷ್ಟು ಪ್ರವೃತರಾಗಿದ್ದಾರೆ.

ಜಿಲ್ಲಾ ಪಂಚಾಯಿತಿ, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಶಾಸಕರು, ಪಕ್ಷದ ಜಿಲ್ಲಾ ಮುಖಂಡರು, ಜಿಲ್ಲಾ,ತಾಲ್ಲೂಕು ಪಂಚಾಯಿತಿ ಸದಸ್ಯರು ಸಭೆಗಳನ್ನು ನಡೆಸುತ್ತಿದ್ದಾರೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಸಂಸದರೂ ಜೆಡಿಎಸ್‌
ಪಕ್ಷದವರಿದ್ದಾರೆ. ಹಾಸನ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಕಾಂಗ್ರೆಸ್‌ ಪಕ್ಷದವರು.
ಹಾಗಾಗಿ ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಪಕ್ಷಗಳ ನಡುವೆ ಪೈಪೋಟಿ ಕಂಡು ಬರುತ್ತಿದೆ. ಜೆಡಿಎಸ್‌, ಬಿಜೆಪಿ ಹೆಚ್ಚು
ಸಕ್ರಿಯವಾಗಿವೆ.

ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟಕ್ಕೂ ತಲುಪಿಸುವುದಕ್ಕಾಗಿ ಗ್ರಾಮ ಸ್ವರಾಜ್ಯ ಎಂಬ ಸಮಾವೇಶವನ್ನು ಜಿಲ್ಲೆಯಲ್ಲಿ ನಡೆಸಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯ ನಂತರ ಸತತ ಹಿನ್ನಡೆ ಅನುಭವಿಸುತ್ತಾ ಬಂದಿರುವ ಕಾಂಗ್ರೆಸ್‌ ಸಹ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ತಳ ಮಟ್ಟದಲ್ಲಿ ಪಕ್ಷ ಸಂಘಟಿಸಲು ಒತ್ತು ನೀಡಿದೆ.

ಹಣ, ಜಾತಿ ಬಲವನ್ನು ಆಧರಿಸಿ ಅಭ್ಯರ್ಥಿಗಳನ್ನು ಬೆಂಬಲಿಸಲು ರಾಜಕೀಯ ಪಕ್ಷಗಳು ಮುಂದಾಗಿವೆ. ಪಕ್ಷದ ಚಿಹ್ನೆಯ ಮೇಲೆ ನಡೆಯುವ ಚುನಾವಣೆ ಆಗಿರದಿದ್ದರೂ ಗ್ರಾಮೀಣ ಭಾಗದಲ್ಲಿ ತಮ್ಮ ಮೂಲ ಬೇರನ್ನು ಗಟ್ಟಿ ಮಾಡಿಕೊಳ್ಳಲು ಪಕ್ಷಗಳಿಗೆ ಇರುವ ಅವಕಾಶವಾಗಿದೆ. ಮೂರು ಪಕ್ಷಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ಅಖಾಡ ರಂಗೇರುವುದು ಖಚಿತವಾಗಿದೆ.

ಕಳೆದ ತಿಂಗಳಿನಿಂದ ಗ್ರಾಮೀಣ ಪ್ರದೇಶದಲ್ಲಿ ಚುನಾವಣೆ ಕುರಿತು ಚಟುವಟಿಕೆ ಆರಂಭಗೊಂಡಿದೆ. ಚುನಾವಣೆ ಘೋಷಣೆಗೂ ಮುನ್ನವೇ ವಾರ್ಡ್‌ಗಳಲ್ಲಿ ಮತದಾರರ ಸಂಖ್ಯೆ, ಜಾತಿವಾರು ಆಧಾರದ ಮೇಲೆ ಬೆಂಬಲಿತ ಅಭ್ಯರ್ಥಿಗಳನ್ನು ಗುರುತಿಸಿ ಅವಿರೋಧವಾಗಿ ಆಯ್ಕೆ ಮಾಡಲು ತೆರೆಮರೆಯಲ್ಲಿ ಯತ್ನವೂ ನಡೆದಿದೆ.

ಅವಧಿ ಮುಗಿಯದ 12 ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೇರ್ಪಡೆಗೊಂಡ ಹತ್ತು ಗ್ರಾಮ ಪಂಚಾತಿಗಳನ್ನು ಹೊರತುಪಡಿಸಿ, ಉಳಿದ 245 ಗ್ರಾಮ ಪಂಚಾಯಿತಿಗಳ 3,352 ಸ್ಥಾನಗಳಿಗೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

‘ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ನಾಯಕರು ಜಿಲ್ಲಾ ಮುಖಂಡರ ಜತೆ ಸಭೆ ನಡೆಸಿ, ಹಲವು ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಮುಖಂಡರು ಪ್ರವಾಸ ಕೈಗೊಂಡು, ಸ್ಥಳೀಯ ನಾಯಕರ ಜತೆ ಸಂವಾದ ನಡೆಸಿ, ಸಮಸ್ಯೆಗಳಿಗೆ ಸ್ಪಂದಿಸುವರು. ಈಗಾಗಲೇ ಅರಸೀಕೆರೆ, ಚನ್ನರಾಯಪಟ್ಟಣದಲ್ಲಿ ಸಭೆ ನಡೆದಿದೆ. ಬುಧವಾರ ಅರಕಲಗೂಡಿನಲ್ಲಿ ಸಭೆ ನಡೆಯಲಿದೆ. ತಳ ಮಟ್ಟದಿಂದ ಕಾರ್ಯಕರ್ತರಿಗೆ ಉತ್ತೇಜನ ನೀಡಲಾಗುವುದು ಹಾಗೂ ಬೂತ್‌ ಮಟ್ಟದ ಸಮಿತಿ ರಚಿಸಲಾಗುವುದು’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್‌ ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT