ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಾರ್ಯಕಾರಿಣಿಗೆ ಸಿದ್ಧತೆ: ಕೆ.ಗೋಪಾಲಯ್ಯ

ಎರಡು ದಿನ ಸಭೆ, ಪಕ್ಷ ಸಂಘಟನೆ, ಆಂತರಿಕ ವಿಚಾರ ಕುರಿತು ಚರ್ಚೆ
Last Updated 9 ಏಪ್ರಿಲ್ 2021, 15:16 IST
ಅಕ್ಷರ ಗಾತ್ರ

ಹಾಸನ: ಮೊದಲ ಬಾರಿಗೆ ನಗರದಲ್ಲಿ ಏ.18, 19ರಂದು ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ಸಹ ಕಾರ್ಯದರ್ಶಿ ಅರುಣಾ, ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಾರೆ. 300ಕ್ಕೂ ಹೆಚ್ಚು ಕೋರ್‌ ಕಮಿಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸುವರು. ತಳ ಮಟ್ಟದಿಂದ ಪಕ್ಷ ಸಂಘಟನೆ, ಪಕ್ಷದ ಆಂತರಿಕ ವಿಚಾರ ಹಾಗೂ ರಾಜ್ಯದ ಆಗು, ಹೋಗುಗಳ ಬಗ್ಗೆ ಚರ್ಚಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊರೊನಾ ಮುನ್ನೆಚ್ಚರಿಕೆ ಕ್ರಮ ಅರಿತು ವೇದಿಕೆ ಸಿದ್ಧಪಡಿಸಲಾಗುತ್ತಿದೆ. 6 ಅಡಿ ಅಂತರದಲ್ಲಿ ಆಸನ ವ್ಯವಸ್ಥೆ ಮಾಡಲಾಗುವುದು. ಒಳ್ಳೆಯ ಸಮಾರಂಭಕ್ಕೆ ಜಿಲ್ಲೆ ಸಾಕ್ಷಿಯಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಸದೃಢಗೊಳಿಸಲು ಕೆಲಸ ಮಾಡಲಾಗುತ್ತಿದೆ. 20 ವರ್ಷಗಳ ಹಿಂದೆ ಹಾಸನದಲ್ಲಿ ಬಿಜೆಪಿಯ ನಾಲ್ಕು ಶಾಸಕರಿದ್ದರು. ಅದೇ ರೀತಿಯ ವಿಜಯಕ್ಕಾಗಿ ಹೈಕಮಾಂಡ್ ಸೂಚನೆಯಂತೆ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಿದ್ದೇವೆ. ಮುಂದಿನ ಚುನಾವಣೆಗಳ ಫಲಿತಾಂಶ ಹೇಗಿರುತ್ತದೆ ಎಂಬುದನ್ನು ಕಾದು ನೋಡಿ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್‌ ನೋಟಿಸ್‌ ನೀಡಿದೆ. ಸೂಕ್ತ ಸಂದರ್ಭದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಯಾವ ಕಾರಣಕ್ಕೂ ಸಿ.ಎಂ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಿ.ಎಂ ಬಿ.ಎಸ್. ಯಡಿಯೂರಪ್ಪ ನಡುವೆ ಯಾವುದೇ ಗೊಂದಲ ಇಲ್ಲ. ವಿರೋಧ ಪಕ್ಷದಲ್ಲಿರುವ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆ ನೀಡುತ್ತಾರೆ. ಅದನ್ನೆಲ್ಲ ಗಂಭೀರವಾಗಿ ಪರಿಗಣಿಸುವುದಿಲ್ಲ. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಪರಮಾಧಿಕಾರ ಯಡಿಯೂರಪ್ಪ ಅವರಿಗೆ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಅಬಕಾರಿ ಇಲಾಖೆ ₹22,700 ಕೋಟಿ ಗುರಿ ಸಾಧಿಸಿ, ಹೆಚ್ಚುವರಿಯಾಗಿ ₹413 ಕೋಟಿ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಗಾಂಜಾ-ಅಫೀಮು ಮಾರಾಟ ದಂಧೆ ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ವಿಭಾಗ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಮೈ.ವಿ.ರವಿಶಂಕರ್, ನವಿಲೆ ಅಣ್ಣಪ್ಪ, ಬಿ.ಎಚ್. ರೇಣುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT