ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 2ನೇ ಅಲೆ ಬಾರದಂತೆ ತಡೆಗಟ್ಟಲು ನವೀನ್ ರಾಜ್ ಸಿಂಗ್ ಸೂಚನೆ

ಹೊರ ರಾಜ್ಯಗಳಿಂದ ಬಂದವರಿಗೆ ಆರ್‌ಟಿ–ಪಿಸಿಆರ್‌ ಪರೀಕ್ಷೆ ಕಡ್ಡಾಯ; ಸಿಂಗ್ ಸೂಚನೆ
Last Updated 1 ಮಾರ್ಚ್ 2021, 14:00 IST
ಅಕ್ಷರ ಗಾತ್ರ

ಹಾಸನ: ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಹೊರ ರಾಜ್ಯದಿಂದ ನೇರವಾಗಿ ಜಿಲ್ಲೆಗೆ ಬರುವ ಪ್ರತಿಯೊಬ್ಬರಿಗೂ ಆರ್‌ಟಿ–ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಅವರು, ನಿತ್ಯ ಮಹಾರಾಷ್ಟದಿಂದ ಚನ್ನರಾಯಪಟ್ಟಣ ತಾಲ್ಲೂಕಿಗೆ 6 ಬಸ್‌ ಹಾಗೂ ಕೇರಳದ ಮಾನಂದವಾಡಿಯಿಂದ ಅರಕಲಗೂಡು ತಾಲ್ಲೂಕಿಗೆ 2 ಬಸ್‌ ಬರುತ್ತಿದೆ. ಈ ಬಸ್‌ಗಳಲ್ಲಿ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲು ಕಾರ್ಯಾಚರಣೆಗಾಗಿ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ, ಪ್ರಾದೇಶಿಕ ಸಾರಿಗೆ ಇಲಾಖೆ, ಪೋಲಿಸ್ ಇಲಾಖೆ ಒಳಗೊಂಡ ತಂಡ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೇರಳದಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಬೇಕು. ಕಂದಾಯ, ಪಂಚಾಯತ್‌ ರಾಜ್ ಹಾಗೂ ಪೋಲಿಸ್ ಇಲಾಖೆ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು. ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು 15 ದಿನಕೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಆರ್ .ಗಿರೀಶ್ ಮಾತನಾಡಿ, ಬೆಂಬಲ ಬೆಲೆಯೊಂದಿಗೆ ರಾಗಿ ಹಾಗೂ ಭತ್ತ ಖರೀದಿ ಮಾಡುವ ವೇಳೆಯಲ್ಲಿ ರೈತರಿಗೆ ತೊಂದರೆ ಉಂಟಾಗದಂತೆ ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಕಲೇಶಪುರ ಭಾಗದಲ್ಲಿ ಹೆಚ್ಚಿನ ಪ್ರವಾಸಿ ತಾಣಗಳು ಅರಣ್ಯ ವ್ಯಾಪ್ತಿಗೆ ಸೇರುತ್ತವೆ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ರಕ್ಷಣೆಯೊಂದಿಗೆ ಪ್ರವಾಸಕ್ಕೆ ಅನುವು ಮಾಡಿಕೊಡುವ ಉದ್ದೇಶವನ್ನು ಸಿಂಗ್‌ ಗಮನಕ್ಕೆ ತಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣಾಧಿಕಾರಿ ಡಾ. ಸತೀಶ್, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT