ಹಾಸನ: ‘ಪದವಿಪೂರ್ವ ಶಿಕ್ಷಣ ಇಲಾಖೆಯನ್ನು, ಶಾಲಾ ಶಿಕ್ಷಣ ಇಲಾಖೆಯೊಂದಿಗೆ ವಿಲೀನಗೊಳಿಸಿ, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಎಂದು ಹೆಸರು ಬದಲಾವಣೆ ಮಾಡಿರುವುದನ್ನು ಹಿಂಪಡೆಯಬೇಕು’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ದೇವರಾಜು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು, ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಳಿಸುವಂತೆ’ ಒತ್ತಾಯಿಸಿದರು.
‘ಜಿಲ್ಲಾ ಹಂತಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರಿಗೆ ವಹಿಸಲು ಸರ್ಕಾರ ಆದೇಶ ಹೊರಡಿಸಿರುವ ಆದೇಶ ಹಿಂಪಡೆಯುವಂತೆ’ ಒತ್ತಾಯಿಸಿದರು.
‘ಪರೀಕ್ಷೆ ಪದ್ಧತಿ ಬದಲಾಯಿಸುವ ಮುನ್ನ ತಜ್ಞರ ಸಮಿತಿ ರಚಿಸಿ, ಸಲಹೆ ಪಡೆಯಬೇಕು. ಆದರೆ ಇದ್ಯಾವುದನ್ನು ಮಾಡದೇ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವುದು ಅವೈಜ್ಞಾನಿಕವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಕುಸಿಯುವ ಸಾಧ್ಯತೆ ಹೆಚ್ಚು’ ಎಂದರು.
‘ಉಪನ್ಯಾಸಕರು ಶೈಕ್ಷಣಿಕ ವರ್ಷಾರಂಭದ ಕೆಲ ತಿಂಗಳು ನೂತನ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುವುದನ್ನು ಬಿಟ್ಟು, ಹಳೆ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಮೌಲ್ಯಮಾಪನದಲ್ಲಿ ತೊಡಗಬೇಕಾಗುತ್ತದೆ. ಜೊತೆಗೆ ಸಂಪೂರ್ಣ ಬೇಸಿಗೆ ರಜೆಯನ್ನು ಉಪನ್ಯಾಸಕರು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ರಜೆರಹಿತ ಇಲಾಖೆಯನ್ನಾಗಿ ಘೋಷಿಸುವಂತೆ’ ಒತ್ತಾಯಿಸಿದರು.
‘ಒಕ್ಕೂಟದ ವತಿಯಿಂದ ನ. 23 ರಂದು ಜಿಲ್ಲಾ ಕೇಂದ್ರಗಳಲ್ಲಿ ಕಪ್ಪು ಪಟ್ಟಿ ಧರಿಸುವ ಮೂಲಕ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಡಿ. 1ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಉಪನ್ಯಾಸಕರ ಸಂಘದ ಅಧ್ಯಕ್ಷ ಸುರೇಶ್ ಕೆ.ಟಿ., ದೀಪಕ್ ಎಚ್.ಎಸ್., ಸುರೇಂದ್ರಕುಮಾರ್, ಕುಮಾರಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.