ಶನಿವಾರ, ಜೂನ್ 19, 2021
21 °C
ಹತ್ತು ಕೇಂದ್ರಗಳಲ್ಲಿ ವ್ಯವಸ್ಥೆ

ಸಿಇಟಿ ಪ್ರವೇಶ ಪರೀಕ್ಷೆಗೆ ಸಕಲ ವ್ಯವಸ್ಥೆ: ಪಿಯು ಫೇಲಾದವರಿಗೂ ಬರೆಯಲು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಏ.29 ಮತ್ತು 30 ರಂದು ನಡೆಯುವ ಸಿ.ಇ.ಟಿ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಇಟಿ ಪ್ರವೇಶ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತರುವ ಸಂದರ್ಭದಲ್ಲಿ ಜಾಗರೂಕತೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ 4668 ವಿದ್ಯಾರ್ಥಿಗಳು ಸಿ.ಇ.ಟಿ. ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಸಿದ್ದತೆಗಳು ಪೂರ್ಣಗೊಂಡಿವೆ. 29ರಂದು ಜೀವವಿಜ್ಞಾನ, ಗಣಿತ ಹಾಗೂ 30ರಂದು ಭೌತವಿಜ್ಞಾನ, ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿವೆ ಎಂದರು.

ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅರ್ಹರು. ಒಂದು ವೇಳೆ ದ್ವೀತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ನೋಂದಾಯಿಸಿದ್ದರೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದ ಜಿಲ್ಲಾಧಿಕಾರಿ, 2019ರ ಜೂನ್‍ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಉತ್ತಿರ್ಣರಾಗುವವರೆಗೂ ಸಿಇಟಿ ರ್‍ಯಾಂಕ್‌ ನೀಡಲಾಗುವುದು. ಈ ವರ್ಷವೇ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ಸೇರಬಹುದು. ಈ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಅವರು ತಿಳಿಸಿದರು.

ವಿದ್ಯಾರ್ಥಿಗಳು ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡು ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿಕೊಳ್ಳುವುದು ಹಾಗೂ ಇದರ ಜೊತೆಗೆ ಕಾಲೇಜಿನ ಗುರುತಿನ ಚೀಟಿ, ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚಾಲನಾ ಪರವಾನಗಿ, ಪಾಸ್‍ಪೋರ್ಟ್ ಇವುಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದರು.

ಸಿ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಪ್ರತಿ ಕೊಠಡಿಯಲ್ಲಿಯೂ ಸಹ ಗೋಡೆ ಗಡಿಯಾರ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೈಗಡಿಯಾರ, ಕ್ಯಾಲ್ಕಲೇಟರ್, ಲಾಗ್ ಟೇಬಲ್ಸ್, ಮೊಬೈಲ್ ಪೋನ್ ಹಾಗೂ ಇತರೆ ವಿದ್ಯುನ್ಮಾನ ಉಪಕರಣ ತರುವುದನ್ನು ನಿಷೇಧಿಸಲಾಗಿದೆ. ಈ ಬಾರಿ ಪ್ರತಿ 20 ಅಭ್ಯರ್ಥಿಗಳಿಗೆ ಒಂದು ಪರೀಕ್ಷಾ ಕೊಠಡಿ ನಿಗದಿಗೊಳಿಸಲಾಗಿದೆ ಎಂದು ಪ್ರಿಯಾಂಕ ವಿವರಿಸಿದರು.

ನಗರದ ವಾಣಿವಿಲಾಸ ಕಾಲೇಜಿನಲ್ಲಿ ಸಿ.ಇ.ಟಿ. ಪ್ರವೇಶ ಪರೀಕ್ಷೆ ನಡೆಯುವ ವೇಳೆ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವುದರಿಂದ ಗೊಂದಲಗಳಿಗೆ ಅವಕಾಶ ನೀಡಬಾರದು. ಸಿ.ಇ.ಟಿ. ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ವೇಳೆಯಲ್ಲಿ ಬೆಲ್ ಬಾರಿಸಲು ಅಗತ್ಯ ಕ್ರಮವಹಿಸಬೇಕು. ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಮೌಖಿಕವಾಗಿ ಸಮಯ ಕುರಿತು ಮಾಹಿತಿ ನೀಡುವಂತೆ ಸಭೆಯಲ್ಲಿ ಹಾಜರಿದ್ದ ವಾಣಿವಿಲಾಸ ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರದಿಂದ 200 ಮೀಟರ್‌ ವ್ಯಾಪ್ತಿಯೊಳಗೆ ಜೆರಾಕ್ಸ್ ಕೇಂದ್ರ ಮುಚ್ಚುವುದು ಕಡ್ಡಾಯವಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಕೊಠಡಿಗಳ ವಿವರ, ಆಸನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ನೀಡಬೇಕಾದ ಸೂಚನೆಗಳನ್ನು ವ್ಯವಸ್ಥಿತವಾಗಿ ಪ್ರಕಟಿಸುವ ವ್ಯವಸ್ಥೆ ಮಾಡಲಾಗಿದೆ. ಅಂಗವಿಕಲರಿಗೆ ವೈದ್ಯಕೀಯ ಪ್ರಮಾಣ ಪತ್ರದ ದಾಖಲೆ ತಂದಲ್ಲಿ ವಿಶೇಷ ಅನುಕೂಲತೆ ಕಲ್ಪಿಸಲಾಗುವುದು ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಎಚ್.ಎಲ್.ನಾಗರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಾಮರಾಜ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತ, ತಹಶೀಲ್ದಾರ್ ಶ್ರೀನಿವಾಸಯ್ಯ, ಹಿಮ್ಸ್ ಮುಖ್ಯ ಆಡಳಿತಾಧಿಕಾರಿ ಕಲ್ಪಶ್ರೀ, ನಗರಸಭೆ ಆಯುಕ್ತೆ ರೂಪ ಶೆಟ್ಟಿ ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು