ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ: ಸಚಿವ ಎಚ್.ಡಿ.ರೇವಣ್ಣ

7

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ: ಸಚಿವ ಎಚ್.ಡಿ.ರೇವಣ್ಣ

Published:
Updated:
Deccan Herald

ಹಾಸನ : ನಗರದ ಹೊಸ ಬಸ್ ನಿಲ್ದಾಣ ಸಮೀಪದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

80 ಅಡಿ ಹಬೀಬಿಯಾ ಸಾಮಿಲ್ ರಸ್ತೆ, ಸಾಲಗಾಮೆ ರಸ್ತೆ ಹಾಗೂ ಡೈರಿ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಅರಕಲಗೂಡು ರಸ್ತೆ ಸೇರಿ ಒಟ್ಟು 6 ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ₹ 10 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ನಗರದಲ್ಲಿ ನನೆಗುದಿಗೆ ಬಿದ್ದಿರುವ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಾಸನ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯವನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗಂಧದ ಕೋಠಿ ಆವರಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿವಾಸ ತೆರವು ಮಾಡಿ, ನಾಲ್ಕು ಎಕರೆ ಪ್ರದೇಶದಲ್ಲಿ ₹ 4 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

ಹತ್ತು ವರ್ಷಗಳಿಂದ ಕಟ್ಟಡ, ಗ್ರಂಥಾಲಯ, ಪ್ರಯೋಗಾಲಯ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು. ಆದ್ದರಿಂದ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ಅಭಿವೃದ್ಧಿಗೆ ₹ 250 ಕೋಟಿ ಬಿಡುಗಡೆ ಮಾಡಲಾಗಿದೆ. ₹ 750 ಕೋಟಿ ಪದವಿ ಕಾಲೇಜುಗಳ ಅಭಿವೃದ್ಧಿಗೆ ನೀಡಲಾಗಿದೆ. ರಾಜ್ಯದ 224 ಕಾಲೇಜುಗಳಿಗೆ ಮೂಲಸೌಲಭ್ಯ ಒದಗಿಸಲು ಪ್ರತಿ ಕಾಲೇಜಿಗೆ ₹ 40 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಅಂದುಕೊಂಡ ಕೆಲಸ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

‘ಬದಾಮಿಯಲ್ಲಿ ಸಿದ್ದರಾಮಯ್ಯ ಅವರ ಅತಿಥಿ ಗೃಹ ಕೆಡವಿ ಹೊಸದಾಗಿ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಸುಳ್ಳು. ಕ್ಷೇತ್ರದಲ್ಲಿ ಶಾಸಕರ ಕಚೇರಿ ಇರಲೇಬೇಕು. ಆದ್ದರಿಂದ ಹಳೆ ಕಟ್ಟಡ ದುರಸ್ತಿಗೆ ₹ 5 ಲಕ್ಷವನ್ನು ಲೋಕೋಪಯೋಗಿ ಇಲಾಖೆಯಿಂದಲೇ ನೀಡಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು ಹಾಗಾಗಿ ಸುಸಜ್ಜಿತ ಕಚೇರಿ ಮಾಡಿಕೊಳ್ಳಲಿ ಬಿಡಿ’ ಎಂದು ಸಮರ್ಥಿಸಿಕೊಂಡರು.

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !